BP NEWS: ರಾಯಚೂರು: ಜೂನ್.28: ಬಡವರಿಗಾಗಿ ರೂಪಿಸಿರುವ ಕಾರ್ಯಕ್ರಮಗಳನ್ನು ಸಕಾಲಿಕವಾಗಿ ಅನುಷ್ಠಾನಗೊಳಿಸಬೇಕು. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಯೋಜನೆಗಳನ್ನು ತಲುಪಿಸಬೇಕೆಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವರಾದ ಎ. ನಾರಾಯಣಸ್ವಾಮಿ ಅವರು ಸಂಬAಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅವರು ಜೂ.28ರ ಮಂಗಳವಾರ ದಂದು ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿದರು.
ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳ ಜಾರಿಗೆ ವಿವಿಧ ಇಲಾಖೆಗಳ ನಡುವಿನ ಸಮನ್ವಯತೆ ಕಾಯ್ದುಕೊಳ್ಳುವ ಮೂಲಕ ಅರ್ಹ ಫಲಾನುಭವಿಗಳಿಗೆ ಸೌಲಭ್ಯಗಳನ್ನು ದೊರೆಯುವಂತೆ ಮಾಡಬೇಕೆಂದು ಸಂಬAಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಹೆರಿಗೆಗೆ ಖಾಸಗಿ ಆಸ್ಪತ್ರೆಗಳನ್ನು ಅವಲಂಬಿಸದೇ ಸರ್ಕಾರಿ ಆಸ್ಪತ್ರೆಯಲ್ಲಿ ಶೇ.100ರಷ್ಟು ಉಚಿತ ಮತ್ತು ಸುರಕ್ಷಿತ ಹೆರಿಗೆ ಮಾಡಿಸಿಕೊಳ್ಳವಂತೆ ಗರ್ಭಿಣಿ ಮಹಿಳೆಯರಿಗೆ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಮನವರಿಕೆ ಮಾಡುವ ಕೆಲಸ ಆಗಬೇಕು. ಅಲ್ಲದೆ ಗರ್ಭಿಣಿ ಮಹಿಳೆಯರಿಗೆ ಉತ್ತಮ ಗುಣಮಟ್ಟದಲ್ಲಿ ಚಿಕಿತ್ಸೆ ನೀಡಬೇಕೆಂದು ಸಚಿವರು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅಪೌಷ್ಟಿಕ ಗರ್ಭಿಣಿಯರಿಗೆ ಕಡಿಮೆ ತೂಕದ ಮತ್ತು ಅನಾರೋಗ್ಯ ಮಕ್ಕಳು ಜನಿಸುವ ಸಾಧ್ಯತೆ ಹೆಚ್ಚಿರುತ್ತದೆ. ಹೀಗಾಗಿ, ಗರ್ಭಿಣಿಯರ ಬಗ್ಗೆ ಕಾಳಜಿ ವಹಿಸಿ ಅವರಿಗೆ ಅಗತ್ಯ ಪೌಷ್ಟಿಕಾಂಶವುಳ್ಳ ಆಹಾರವನ್ನು ಅಂಗನವಾಡಿ ಕೇಂದ್ರಗಳ ಮೂಲಕ ಸಮರ್ಪಕವಾಗಿ ಒದಗಿಸಬೇಕು. ಅಲ್ಲದೆ ಈ ಬಗ್ಗೆ ಹೆಚ್ಚಿನ ಮಟ್ಟದಲ್ಲಿ ಜಾಗೃತಿ ಮೂಡಿಸುವ ಕಾರ್ಯವಾಗಬೇಕೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಿಗೆ ಸಚಿವರು ಸೂಚಿಸಿದರು.
ಜಿಲ್ಲೆಯಲ್ಲಿ ಬಾಲಕಾರ್ಮಿಕ ಪದ್ಧತಿ ಸಂಪೂರ್ಣವಾಗಿ ನಿರ್ಮೂಲನೆವಾಗಬೇಕು. ಅಲ್ಲದೆ ಈ ಬಗ್ಗೆ ವಿವಿಧ ಇಲಾಖೆಯಗಳ ಸಂಯುಕ್ತಾಶ್ರಯದಲ್ಲಿ ಜಾಗೃತಿಯನ್ನು ಮೂಡಿಸುವ ಕೆಲಸವಾಗಬೇಕೆಂದು ಸಂಬAಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಮುಂಗಾರು ಕೃಷಿ ಚಟುವಟಿಕೆಗಳು ಆರಂಭಗೊAಡಿದ್ದು, ರೈತರಿಗೆ ಅಗತ್ಯವಾದ ಬಿತ್ತನೆ ಬೀಜ ಹಾಗೂ ರಸಗೊಬ್ಬರದ ಕೊರತೆಯಾಗದಂತೆ ನೋಡಿಕೊಳ್ಳಬೇಕು. ರೈತರಿಗೆ ಯಾವುದೇ ಒತ್ತಡ ಹಾಕದೆ ರಸಗೊಬ್ಬರ ಪೂರೈಕೆ ಮಾಡಬೇಕು. ಹಾಗೂ ಕೇಂದ್ರ, ರಾಜ್ಯ ಸರ್ಕಾರದಿಂದ ಜಾರಿಯಾಗುವ ಯೋಜನೆಗಳು ರೈತರಿಗೆ ಸರಿಯಾಗಿ ತಲುಪಿಸಲು ಕ್ರಮ ಕೈಗೊಳ್ಳಬೇಕೆಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಿಗೆ ಸಚಿವರು ಸೂಚನೆ ನೀಡಿದರು.
ಈ ವೇಳೆ ರಾಯಚೂರು ನಗರ ಶಾಸಕ ಡಾ.ಎಸ್.ಶಿವರಾಜ ಪಾಟೀಲ್ ಅವರು ಮಾತನಾಡಿ, ಜಿಲ್ಲೆಯಲ್ಲಿ ಮುಂಗಾರು ಹಂಗಾಮಿಗಾಗಿ ಬಿತ್ತನೆಗೆ ಶೇಕಡಾ 27ರಷ್ಟು ಮಳೆಯಾಗಿದ್ದು, ಜಿಲ್ಲೆಯಲ್ಲಿ ರಾಯಚೂರು ತಾಲ್ಲೂಕಿನಲ್ಲಿ ಅತಿಕಡಿಮೆ ಪ್ರಮಾಣದಲ್ಲಿ ಮಳೆಯಾಗಿದೆ. ಈ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಮೋಡಬಿತ್ತನೆಗೆ ಕ್ರಮವಹಿಸುವಂತೆ ಕೃಷಿ ಇಲಾಖೆಯ ಜಂಟಿ ನಿರ್ದೇಶಕರಿಗೆ ಸಲಹೆ ನೀಡಿದರು.
ಕೇಂದ್ರ ಹಾಗೂ ರಾಜ್ಯ ಸರಕಾರಗಳು ಜಲಜೀವನ್ ಮಿಷನ್ (ಜೆಜೆಎಂ) ಯೋಜನೆ ಮೂಲಕ ಮನೆ ಮನೆಗೆ ಶುದ್ಧ ಕುಡಿಯುವ ನೀರಿನ ನಳ್ಳಿ ಸಂಪರ್ಕ ಒದಗಿಸುತ್ತಿದ್ದು, ಕಾಮಗಾರಿಯು ಗುಣಮಟ್ಟದಿಂದ ಕೂಡಿರಬೇಕು. ಅಲ್ಲದೆ ನಳ ಸಂಪರ್ಕದ ಕುರಿತು ಹೆಚ್ಚಿನ ಗಮನ ಹರಿಸಬೇಕೆಂದು ಸಂಬAಧಿಸಿದ ಅಧಿಕಾರಿಗಳಿಗೆ ಸಚಿವರು ನಿರ್ದೇಶನ ನೀಡಿದರು.
ಜಿಲ್ಲೆಯಲ್ಲಿ ಸುಮಾರು 300ಅಂಗನವಾಡಿ ಕೇಂದ್ರಗಳ ಕೊರತೆ ಇದ್ದು, ಈಗಾಗಲೇ ರಾಜ್ಯ ಸರ್ಕಾರದಿಂದ 108ಕ್ಕೂ ಹೆಚ್ಚು ಅಂಗನವಾಡಿ ಕೇಂದ್ರಗಳನ್ನು ಮಂಜೂರು ಮಾಡಲಾಗಿದೆ. ಅಲ್ಲದೆ ಜಿಲ್ಲೆಯಲ್ಲಿ ಒಟ್ಟು 5 ಮಾರುಕಟ್ಟೆಗಳನ್ನು ಡಿಜಿಟಲ್ ಮಾರುಕಟ್ಟೆಯಾಗಿ ಮಾಡಲಾಗಿದ್ದು, ರೈತರಿಂದ ನೇರವಾಗಿ ವ್ಯವಹಾರ ಮಾಡಲಾಗುತ್ತಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.
ಇದೇ ಸಂದರ್ಭದಲ್ಲಿ ಸಂಸದ ರಾಜಾ ಅಮರೇಶ್ವರ ನಾಯಕ, ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ,
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನೂರ್ ಜಹರಾ ಖಾನಂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್.ಬಿ, ಅಪರ ಜಿಲ್ಲಾಧಿಕಾರಿ ಡಾ.ಕೆ.ಆರ್.ದುರುಗೇಶ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಶಶಿಕಾಂತ್ ಶಿವಪೂರೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.,ಸುರೇಂದ್ರ ಬಾಬು, ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ದೇವಿಕಾ ಆರ್., ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ವೃಷಬೇಂದ್ರಯ್ಯ ಸ್ವಾಮಿ, ಲೀಡ್ ಬ್ಯಾಂಕ್ ಮ್ಯಾನೇಜರ್ ಬಾಬು ಬಳಗಾನೂರು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಇದ್ದರು.