BP NEWS: ರಾಯಚೂರು: ಜುಲೈ.05: ಕಲ್ಯಾಣ ಕರ್ನಾಟಕ ಭಾಗದ ಶಾಲೆಗಳಲ್ಲಿ ಕಲಿಕೆಯ ಗುಣಮಟ್ಟವನ್ನು ಉತ್ತಮಪಡಿಸಲು ಬಿಇಒ ಸೇರಿದಂತೆ ಇಲಾಖೆಯ ಅಧಿಕಾರಿಗಳು ಶಾಲೆಗಳಿಗೆ ನಿರಂತರ ಭೇಟಿ ನೀಡಿ ಪರಿಶೀಲಿಸಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರಾದ ಬಿ.ಸಿ.ನಾಗೇಶ್ ಅವರು ಹೇಳಿದರು.
ಅವರು ಜು.5ರ ಮಂಗಳವಾರ ದಂದು ನಗರದ ಜಿಲ್ಲಾ ಪಂಚಾಯತ್ ಸಂಭಾAಗಣದಲ್ಲಿ ನಡೆದ ರಾಯಚೂರು, ವಿಜಯನಗರ, ಕೊಪ್ಪಳ ಹಾಗೂ ಬಳ್ಳಾರಿ ಜಿಲ್ಲೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿದರು.
ಡಿಡಿಪಿಐ ಮತ್ತು ಬಿಇಒಗಳು ಶಾಲೆಗಳಿಗೆ ಭೇಟಿ ನೀಡಿ ಮಕ್ಕಳ ಕಲಿಕೆಯ ಗುಣಮಟ್ಟವನ್ನು ನಿರಂತರವಾಗಿ ಗಮನಿಸಬೇಕು. ತರಗತಿಯಲ್ಲಿ ಕುಳಿತುಕೊಂಡು ಶಿಕ್ಷಕರ ಬೋಧನಾ ಮಟ್ಟವನ್ನು ಗಮನಿಸಿ ಅವರಿಗೆ ಸೂಕ್ತ ಸಲಹೆ ಸೂಚನೆಗಳನ್ನು ನೀಡಬೇಕು ಎಂದರು.
ಶಾಲೆಗೆ ದಾಖಲಾಗುವ ಮಕ್ಕಳು ವಿದ್ಯಾಭ್ಯಾಸ ಮೊಟಕುಗೊಳಿಸುವ ಪ್ರಕರಣಗಳ ಮೇಲೆ ನಿಗಾ ವಹಿಸಬೇಕು. ಮಕ್ಕಳು ವಿದ್ಯಾಭ್ಯಾಸ ಮುಂದುವರೆಸದೇ ಇರುವ ಬಗ್ಗೆ ಪರಿಶೀಲಿಸಬೇಕು. ಅಂತಹ ಮಕ್ಕಳನ್ನು ಮತ್ತೆ ಶಾಲೆಗೆ ಕರೆತರಲು ವಿಶೇಷ ದಾಖಲಾತಿ ಅಭಿಯಾನ ನಡೆಸಬೇಕು ಎಂದು ಸಂಬAಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕೊರೊನಾ ಸಾಂಕ್ರಾಮಿಕದಿAದ ಉಂಟಾಗಿರುವ ಕಲಿಕಾ ಹಿನ್ನಡೆಯನ್ನು ಸರಿದೂಗಿಸಲು ಮತ್ತು ಮಕ್ಕಳ ಕಲಿಕಾ ಗುಣಮಟ್ಟವನ್ನು ಸುಧಾರಿಸಲು ಕಲಿಕಾ ಚೇತರಿಕೆ ಕಾರ್ಯಕ್ರಮ ನೆರವಾಗಿದ್ದು, ಕಾರ್ಯಕ್ರಮವನ್ನು ಉತ್ತಮ ರೀತಿಯಲ್ಲಿ ಅನುಷ್ಠಾನಗೊಳಿಸಬೇಕೆಂದರು.
ಕಲಿಕಾ ಚೇತರಿಕೆ ಕಾರ್ಯಕ್ರಮದ ಅನುಷ್ಠಾನ ಮಾಡುವ ಬಗ್ಗೆ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಶಾಲೆಗಳನ್ನು ದತ್ತು ನೀಡಬೇಕು. ಅಲ್ಲದೆ ಮೇಲ್ವಿಚಾರಣ ತಂಡವು ಪ್ರತಿ 15 ದಿನಕ್ಕೆ ಒಂದು ಬಾರಿ ಶಾಲೆಗಳಿಗೆ ಭೇಟಿ ನೀಡಿ ಕಲಿಕಾ ಚೇತರಿಕೆಯ ಅನುಷ್ಠಾನ ಹಾಗೂ ಪ್ರಗತಿ ಪರಿಶೀಲನೆ ನಡೆಸಬೇಕೆಂದರು.
ಜಿಲ್ಲೆಯಲ್ಲಿ ಕಲಿಕಾ ಚೇತರಿಕಾ ಕಾರ್ಯಕ್ರಮವನ್ನು ಉತ್ತಮವಾಗಿ ಅನುಷ್ಠಾನ ಮಾಡಿದ ಶಿಕ್ಷಕರಿಗೆ ಪ್ರಶಂಶಿಸುವುದು ಹಾಗೂ ಆ ಶಾಲೆಗಳಲ್ಲಿ ಕೈಗೊಂಡ ಉತ್ತಮ ಅಂಶಗಳ ಕುರಿತು ಉಳಿದ ಶಾಲೆಗಳಿಗೆ ಪ್ರಚಾರಕ್ಕೆ ಅಗತ್ಯ ಕ್ರಮ ವಹಿಸಲಾಗುತ್ತದೆ ಎಂದರು.
ಪ್ರತಿ ಜಿಲ್ಲೆಯ ಶಾಲೆಯಲ್ಲಿ ಮಧ್ಯಾಹ್ನ ಊಟ ಮಾಡುವ ಮಕ್ಕಳ ಸಂಖ್ಯೆ ಎಷ್ಟು, ಹಾಜರಾದ ಮಕ್ಕಳ ಸಂಖ್ಯೆ ಹಾಗೂ ದಾಖಲಾತಿಯಾದ ಮಕ್ಕಳ ಸಂಖ್ಯೆ ಎಷ್ಟಿದೆ ಎಂಬುದರ ಮಾಹಿತಿ ಪಡೆದುಕೊಂಡರು. ಸರಿಯಾದ ರೀತಿಯ ಅಂಕಿಅAಶ ಸಂಗ್ರಹಿಸಿ ಮಾಹಿತಿ ನೀಡಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಯಾವ ಶಾಲೆಗಳಲ್ಲಿ ಪಠ್ಯ ಪುಸ್ತಕ ವಿತರಣೆಯಾಗಿಲ್ಲ. ಅಂತಹ ಶಾಲೆಗಳಿಗೆ ಮಕ್ಕಳ ಕಲಿಕೆಗಾಗಿ ಕಲಿಕಾ ಹಾಳೆಗಳನ್ನು ನೀಡಿ ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗದ ಹಾಗೆ ನೋಡಿಕೊಳ್ಳಬೇಕು. ಶಾಲೆಗಳಿಗೆ ತೆರಳಿ ಮಕ್ಕಳ ಕಲಿಕೆಯ ಕುರಿತು ಪರಿಶೀಲಿಸಬೇಕೆಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ರಾಯಚೂರು ಜಿಲ್ಲೆ ಮಹಾತ್ವಕಾಂಕ್ಷೆ ಜಿಲ್ಲೆಯಾಗಿರುವುದರಿಂದ ಯಾವುದೇ ಕಾರಣಕ್ಕೂ ತೊಂದರೆಯಾಗದ ಹಾಗೆ ಶಿಕ್ಷಕರು, ಅಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು ಜೊತೆಗೆ ಅಧಿಕಾರಿಗಳು ಕಚೇರಿಯಲ್ಲೇ ಕೂಡದೇ ಪ್ರವಾಸ ಕೈಗೊಂಡು ಯಾವ ಶಾಲೆಯಲ್ಲಿ ಸಮಸ್ಯೆ ಇದೆ, ಶಿಕ್ಷಕರ ಕೊರತೆ, ಕಟ್ಟಡಗಳ ಸ್ಥಿಗತಿಗಳ ಕುರಿತು ಗಮನ ಹರಿಸಬೇಕು ಎಂದು ಸೂಚನೆ ನೀಡಿದರು.
ಮಕ್ಕಳ ಸೇವೆ ಮಾಡುವುದು ನಮ್ಮ ನಿಮ್ಮೆಲ್ಲರ ಪುಣ್ಯ ಇಂತಹ ಅವಕಾಶವನ್ನು ಸದುಪಯೋಗ ಪಡೆದುಕೊಂಡು ಬೇಜವಾಬ್ದಾರಿ ತೋರದೆ ಪ್ರಮಾಣಿಕವಾಗಿ ಕೆಲಸ ಮಾಡಿದ್ದಲ್ಲಿ ಆ ಶ್ರಯಸ್ಸು ಎಲ್ಲರಿಗೂ ತಲುಪುತ್ತದೆ ಎಂದು ಹೇಳಿದರು. ಮುಂದಿನ ತಿಂಗಳ ಕೆಡಿಪಿ ಸಭೆಯಯೊಳಗೆ ಎಲ್ಲ ಅಂಕಿಅAಶಗಳು ಸರಿಯಾಗಿರಬೇಕು ಇಲ್ಲದಿದ್ದರೆ ಅಂತವರ ವಿರುದ್ಧ ಕ್ರಮಕೋಗೊಳ್ಳಲಾಗುವುದು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಇದೇ ಸಂದರ್ಭದಲ್ಲಿ ರಾಯಚೂರು ನಗರ ಶಾಸಕ ಡಾ. ಶಿವರಾಜ ಪಾಟೀಲ್, ರಾಯಚೂರು ಗ್ರಾಮೀಣ ಶಾಸಕ ದದ್ದಲ್ ಬಸನಗೌಡ, ಮಾನವಿ ಶಾಸಕ ರಾಜಾ ವೆಂಕಟಪ್ಪ ನಾಯಕ, ವಿಧಾನ ಪರಿಷತ್ ಸದಸ್ಯ ಶಶಿಲ್ ಜಿ. ನಮೊಶಿ,ಶಿಕ್ಷಣ ಇಲಾಖೆಯ ಅಪರ ಆಯುಕ್ತೆ ಗರೀಮ ಪವಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನೂರ್ ಜಹರಾ ಖಾನಂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್.ಬಿ, ಅಪರ ಜಿಲ್ಲಾಧಿಕಾರಿ ಡಾ.ಕೆ.ಆರ್ ದುರುಗೇಶ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ವೃಷಬೇಂದ್ರಯ್ಯ ಸ್ವಾಮಿ ಸೇರಿದಂತೆ ವಿವಿಧ ಜಿಲ್ಲೆಯ ಅಧಿಕಾರಿಗಳು ಉಪಸ್ಥಿತರಿದ್ದರು.