ಮಾ.31ರಿಂದ ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆ; ಈ ಬಾರಿ 23,444 ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳು ಪರೀಕ್ಷೆಗಳು ಸುಗಮವಾಗಿ ನಡೆಯಲು ಅಗತ್ಯ ಸಿದ್ದತೆ ಕೈಗೊಳ್ಳಲು ಡಿಸಿ ಮಾಲಪಾಟಿ ಸೂಚನೆ

0
97

BP NEWS: ಬಳ್ಳಾರಿ: ಮಾರ್ಚ್.17: ಇದೇ ಮಾರ್ಚ್ 31ರಿಂದ ಏಪ್ರೀಲ್ 15ರವರೆಗೆ ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆಗಳು ಪ್ರಮಾಣಿತ ಕಾರ್ಯಾಚರಣೆಯ ವಿಧಾನದಂತೆ ನಡೆಯಲು ಪರೀಕ್ಷಾ ಕೇಂದ್ರಗಳಿಗೆ ಬೇಕಾದ ಅಗತ್ಯ ಮೂಲಭೂತ ಸೌಲಭ್ಯಗಳ ವ್ಯವಸ್ಥೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಪವನ್‍ಕುಮಾರ್ ಮಾಲಪಾಟಿ ಅವರು ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಮಾರ್ಚ್ 31ರಿಂದ ಏಪ್ರೀಲ್ 15ರವರೆಗೆ ನಡೆಯಲಿರುವ ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆಯ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಈ ಬಾರಿಯ ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆಗಳು 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ನಡೆಯುತ್ತಿದ್ದು, ಪರೀಕ್ಷಾ ಸಮಯದಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ಅನಧೀಕೃತ ವ್ಯಕ್ತಿ ಮತ್ತು ಚುನಾವಣಾ ಪ್ರಚಾರ ಪ್ರಕ್ರಿಯೆಯು ಕಂಡುಬಂದಲ್ಲಿ ತಕ್ಷಣವೇ ಜಿಲ್ಲಾಡಳಿತ ಗಮನಕ್ಕೆ ತರಬೇಕು ಎಂದು ಸೂಚಿಸಿದರು.
ಜಿಲ್ಲೆಯಲ್ಲಿನ ಒಟ್ಟು 302 ಶಾಲೆಗಳಿಂದ ಹತ್ತನೇಯ ತರಗತಿಯಲ್ಲಿ ಗಂಡು 11634, ಹೆಣ್ಣು 11810 ಸೇರಿದಂತೆ ಒಟ್ಟು 23,444 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. 71 ಪರೀಕ್ಷಾ ಕೇಂದ್ರಗಳನ್ನು ಗುರುತಿಸಿದ್ದು, ಅದರಲ್ಲಿ 4 ಸೂಕ್ಷ್ಮ ಮತ್ತು ಅತೀಸೂಕ್ಷ್ಮ ಕೇಂದ್ರಗಳನ್ನಾಗಿ ಗುರುತಿಸಲಾಗಿದೆ. 1048 ಕೊಠಡಿಗಳನ್ನು ಪರೀಕ್ಷಾ ಕೊಠಡಿಗಳನ್ನಾಗಿ ತೆಗೆದುಕೊಂಡು 6 ಅಡಿ ಅಂತರದಲ್ಲಿ ಒಟ್ಟು 11,772 ಡೆಸ್ಕ್‍ಗಳಲ್ಲಿ ಆಸನ ವ್ಯವಸ್ಥೆ ಮಾಡಲಾಗಿದೆ. ಒಂದು ಕೊಠಡಿಯಲ್ಲಿ 24 ವಿದ್ಯಾರ್ಥಿಗಳಿಗೆ ಆಸನ ವ್ಯವಸ್ಥೆಯನ್ನು ಸಹ ಮಾಡಲಾಗಿದೆ ಎಂದು ಅವರು ತಿಳಿಸಿದರು.
ಗೌಪ್ಯ ಸಾಮಾಗ್ರಿಗಳ ಸಂರಕ್ಷಣೆಗಾಗಿ, ಪರೀಕ್ಷಾ ಪಾವಿತ್ರತೆ ಹಾಗೂ ಶಾಂತಿಯುತ ವಾತಾವರಣಕ್ಕಾಗಿ ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಹಾಗೂ ಉತ್ತರ ಪತ್ರಿಕೆಗಳನ್ನು ತಾಲೂಕುಗಳಿಂದ ಜಿಲ್ಲಾ ಕೇಂದ್ರಕ್ಕೆ ಮತ್ತು ಮೌಲ್ಯಮಾಪನ ಕೇಂದ್ರಕ್ಕೆ ಸಾಗಿಸಲು ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸುವಂತೆ ಪೊಲೀಸ್ ಇಲಾಖೆಗೆ ಸೂಚಿಸಲಾಯಿತು.
ಮಾರ್ಚ್ ಕೊನೆಯ ವಾರದಿಂದ ಕೋವಿಡ್ ಉಲ್ಬಣಗೊಳ್ಳುವಿಕೆ ಸಂಭವವಿದ್ದು, ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಬೆಳಕಿನ ವ್ಯವಸ್ಥೆ, ಶೌಚಾಲಯ ವ್ಯವಸ್ಥೆ ಇತರೆ ವ್ಯವಸ್ಥೆಗಳನ್ನು ಪರಿಶೀಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರು, ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಜುಬೇರ್, ಸಾರ್ವಜಜಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಅಂದಾನಪ್ಪ ವಡಗೇರಿ ಸೇರಿದಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಜಿಲ್ಲೆಯ ಎಲ್ಲಾ ಶಾಲಾ ಮುಖ್ಯಗುರುಗಳು ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here