BP NEWS: ಬಳ್ಳಾರಿ: ಜುಲೈ.21:
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಉಪನಿರ್ದೇಶಕರ ಕಾರ್ಯಾಲಯ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಇವರ ಆಶಯದಲ್ಲಿ 2023-24ನೇ ಸಾಲಿನ ಸರ್ಕಾರಿ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿಗಳಿಗಾಗಿ ‘ವಿದ್ಯಾರ್ಥಿ ವಿಹಾರ’ ಒಂದು ದಿನದ ಶೈಕ್ಷಣಿಕ ಪ್ರವಾಸ ಕಾರ್ಯಕ್ರಮಕ್ಕೆ ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರಾ ಅವರು ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಶುಕ್ರವಾರ ಚಾಲನೆ ನೀಡಿದರು.
ಜಿಲ್ಲೆಯ ಐದು ತಾಲೂಕುಗಳ ಸರ್ಕಾರಿ ಪ್ರೌಢಶಾಲೆಯಲ್ಲಿ ಓದುತ್ತಿರುವ 9ನೇ ತರಗತಿ ವಿದ್ಯಾರ್ಥಿಗಳಿಗೆ ವಾರದಲ್ಲಿ ಪ್ರತಿ ಭಾನುವಾರದಂದು ಒಂದು ದಿನದ ಪ್ರವಾಸಕ್ಕೆ ಇಂದು ಸಾಂಕೇತಿಕವಾಗಿ ಚಾಲನೆ ನೀಡಲಾಯಿತು.
ಪ್ರೌಢಶಾಲಾ ವಿಭಾಗದ 9 ನೇ ತರಗತಿ ವಿದ್ಯಾರ್ಥಿಗಳಿಗಾಗಿಯೇ ಪ್ರತಿ ಭಾನುವಾರದಂದು ಪ್ರವಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಹನುಮಕ್ಕ ಅವರು ಮಾಹಿತಿ ನೀಡಿದರು.
ಸರ್ಕಾರಿ ಶಾಲೆಯಲ್ಲಿ 9ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಈ ಅವಕಾಶ ಕಲ್ಪಿಸಲಾಗಿದೆ. ಜಿಲ್ಲೆಯ ಎಲ್ಲಾ ಸರ್ಕಾರಿ ಶಾಲೆಗಳಿಂದ 9 ನೇ ತರಗತಿ ವಿದ್ಯಾರ್ಥಿಗಳು ಒಂದು ದಿನದ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಈ ಕಾರ್ಯಕ್ರಮವು ಪ್ರತಿ ಭಾನುವಾರದಂತೆ 30 ವಾರ ನಡೆಯಲಿದೆ. ಇಂದು ಸಂಡೂರು ತಾಲೂಕಿನ ವಡ್ಡು ಗ್ರಾಮದ ಸರ್ಕಾರಿ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿಗಳ ಪ್ರವಾಸಕ್ಕೆ ಚಾಲನೆ ನೀಡಲಾಯಿತು ಎಂದರು.
ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು, ನೋಡಲ್ ಅಧಿಕಾರಿಗಳು, ಶಿಕ್ಷಕರು ಹಾಗೂ ಶಾಲಾ ಮಕ್ಕಳು ಹಾಜರಿದ್ದರು.