BP NEWS: ಬಳ್ಳಾರಿ: ಜುಲೈ.25:
ಸರ್ಕಾರದ ವಿವಿಧ ಯೋಜನೆಗಳು ಹಾಗೂ ಸೌಲಭ್ಯಗಳನ್ನು ಜನರಿಗೆ ಸಕಾಲದಲ್ಲಿ ತಲುಪುವಂತೆ ಅಧಿಕಾರಿಗಳು ಕ್ರಮವಹಿಸಬೇಕು. ಜನಪರ ಕೆಲಸಗಳು ತಮ್ಮ ಕೆಲಸವೆಂದು ಭಾವಿಸಿ ಅಧಿಕಾರಿಗಳು ಆಸಕ್ತಿ ವಹಿಸಿ ಕಾರ್ಯನಿರ್ವಹಿಸಬೇಕು ಎಂದು ಬಳ್ಳಾರಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾದ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನೂತನವಾಗಿ ಅಧಿಕಾರ ವಹಿಸಿಕೊಂಡ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಮಂಗಳವಾರದಂದು ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಗಳ ಜೊತೆ ನಡೆಸಿದ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ಪ್ರತಿಯೊಬ್ಬ ಅಧಿಕಾರಿಗಳು ತಮ್ಮ ಸೇವೆಯಲ್ಲಿ ಬದ್ಧತೆ ತೋರಬೇಕು. ಸರ್ಕಾರದ ಯೋಜನೆಗಳನ್ನು ಸಾರ್ವಜನಿಕರಿಗೆ ತಲುಪಿಸುವಲ್ಲಿ ಯಾವುದೇ ಕಾಲ ವಿಳಂಬ ಮಾಡಬಾರದು. ಅಂದಾಗ ಮಾತ್ರ ಆಡಳಿತ ಬಗ್ಗೆ ಸಾರ್ವಜನಿಕರಿಂದ ಒಳ್ಳೆಯ ಅಭಿಪ್ರಾಯ ಬರಲಿದೆ ಎಂದರು.
ಕೃಷಿ ಇಲಾಖೆಗೆ ಸಂಬಂಧಿಸಿದಂತೆ ಬಿತ್ತನೆ ಬೀಜ, ರಸಗೊಬ್ಬರ, ಬೆಳೆ ವಿಮೆ ಪರಿಹಾರ ಕುರಿತಂತೆ ಮಾಹಿತಿ ಪಡೆದುಕೊಂಡರು. ರೈತರ ಆತ್ಮಹತ್ಯೆ ಸಂಬಂಧಿಸಿದಂತೆ ಪರಿಹಾರ ತಲುಪಿದೆಯೇ ಎಂಬ ಮಾಹಿತಿ ಪಡೆದ ಅವರು, ಇಲ್ಲದಿದ್ದಲ್ಲಿ 15 ದಿನಗಳೊಳಗಾಗಿ ಪರಿಹಾರ ಹಣ ತಲುಪುವಂತೆ ಅಧಿಕಾರಿಗಳು ಕ್ರಮವಹಿಸಬೇಕು. ಈ ಕುರಿತು ಆಯಾ ತಾಲೂಕು ತಹಶೀಲ್ದಾರರ ಜೊತೆ ಚರ್ಚಿಸಲಾಗುವುದು ಎಂದರು.
ಶಿಕ್ಷಣ ಇಲಾಖೆಗೆ ಸಂಬಂಧಿಸಿದಂತೆ ಪಠ್ಯಪುಸ್ತಕ, ಸಮವಸ್ತ್ರ, ಶೂ ವಿತರಣೆ ಹಾಗೂ ಶಾಲೆ ಬಿಟ್ಟ ಮಕ್ಕಳ ವಿವರ ಮತ್ತು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಮಾಹಿತಿ ಪಡೆದರು.
ಆರೋಗ್ಯ ಇಲಾಖೆಯಲ್ಲಿ ಪ್ರಸ್ತುತ ಸರ್ಕಾರಿ ಆಸ್ಪತ್ರೆಗಳಲ್ಲಿ ಲಭ್ಯವಿರುವ ಸೌಲಭ್ಯ ಔಷಧಿಗಳ ವಿವರ, ಸೌಲಭ್ಯಗಳು, ಚಿಕಿತ್ಸೆ ವಿವರ ಪಡೆದುಕೊಂಡರು. ಶಿಕ್ಷಣ, ಆರೋಗ್ಯ ಸೇರಿದಂತೆ ಮೂಲಭೂತ ಅಗತ್ಯತೆಗಳ ಸೇವೆಗೆ ಆದ್ಯತೆ ನೀಡಲಾಗುವುದು ಎಂದರು.
ಜೊತೆಗೆ ಜಿಲ್ಲೆಯಲ್ಲಿ ಆರೋಗ್ಯ, ಶಿಕ್ಷಣ ಹಾಗೂ ವಸತಿ ನಿಲಯಗಳಿಗೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಹೆಚ್ಚಿನ ಮುತುವರ್ಜಿ ವಹಿಸಿ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಗೆ ಸಂಬಂಧಿಸಿದಂತೆ, ಗರ್ಭೀಣಿ ತಾಯಂದಿರಿಗೆ ಪೌಷ್ಟಿಕ ಆಹಾರ ವಿತರಣೆ ಮತ್ತು ತಾಯಿಕಾರ್ಡ್ ವಿತರಣೆ ಸೌಲಭ್ಯಗಳ ಕುರಿತು ಮಾಹಿತಿ ಪಡೆದರು. ಗರ್ಭಿಣಿಯರು ಸರ್ಕಾರಿ ಆಸ್ಪತ್ರೆಗಳಲ್ಲಿ ಹೆರಿಗೆ ಆಗುವಂತೆ ಕ್ರಮ ಕೈಗೊಳ್ಳಬೇಕು. ಅಂಗನವಾಡಿ, ಆಶಾ ಕಾರ್ಯಕರ್ತೆಯರು ಕ್ಷೇತ್ರಭೇಟಿ ನಡೆಸಬೇಕು ಎಂದರು.
ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷಿ ಯೋಜನೆಗೆ ಸಂಬಂಧಿಸಿದಂತೆ, ಆಗಸ್ಟ್ 15 ರೊಳಗಾಗಿ ನಿಗದಿತ ಗುರಿ ತಲುಪಲು ಪ್ರಗತಿ ಸಾಧಿಸಬೇಕು. ಸರ್ಕಾರದ ಯೋಜನೆಗಳು ಸಾರ್ವಜನಿಕರಿಗೆಲ್ಲರಿಗೂ ತಲುಪುವಂತೆ ಕ್ರಮವಹಿಸಬೇಕು ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಬಸ್ ಸೌಲಭ್ಯ ಕೊರತೆಯಾಗದಂತೆ ನೋಡಿಕೊಳ್ಳಬೇಕು. ಗ್ರಾಮೀಣರ ಹಾಗೂ ವಿದ್ಯಾರ್ಥಿಗಳ ಅನುಕೂಲಕ್ಕೆ ತಕ್ಕಂತೆ ಗ್ರಾಮೀಣ ಭಾಗಗಳಲ್ಲಿ ಹೆಚ್ಚಿನ ಬಸ್ ಗಳನ್ನು ಓಡಿಸುವಂತೆ ಸೂಚಿಸಿ, ಇದರಿಂದ ವಿದ್ಯಾರ್ಥಿಗಳಿಂದ ದೂರುಗಳು ಬರುವುದಿಲ್ಲ ಎಂದು ಸಾರಿಗೆ ಅಧಿಕಾರಿಗಳಿಗೆ ತಿಳಿಸಿದರು.
ಜಿಲ್ಲೆಯಲ್ಲಿ ಆರೋಗ್ಯ ಕೇಂದ್ರ, ವಸತಿ ನಿಲಯ ಕಟ್ಟಡಕ್ಕಾಗಿ ಸ್ಥಳದ ಕೊರತೆಯಿದ್ದಲ್ಲಿ ಪ್ರಸ್ತಾವನೆ ಸಲ್ಲಿಸಿ, ಇಲಾಖೆಗೆ ಸಂಬಂಧಿಸಿದ ಅಧಿಕಾರಿಗಳ ಜೊತೆ ಪರಸ್ಪರ ಸಂಪರ್ಕದಲ್ಲಿರಬೇಕು. ತಾಲೂಕು ಮಟ್ಟದ ಅಧಿಕಾರಿಗಳ ಜೊತೆ ಚರ್ಚಿಸಬೇಕು ಎಂದರು.
ಜಿಲ್ಲೆಯಲ್ಲಿ ಪ್ರಗತಿಯಲ್ಲಿರುವ ಕಾಮಗಾರಿ ಹಾಗೂ ನೆನೆಗುದಿಗೆ ಬಿದ್ದಿರುವ ಕಾಮಗಾರಿಗಳ ಪಟ್ಟಿ ಮಾಡಿ ಸಲ್ಲಿಸುವಂತೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಜೆಸ್ಕಾಂ ಇಲಾಖೆ ಸೇರಿದಂತೆ ಇತರೆ ಇಲಾಖೆಗಳ ಮಾಹಿತಿ ಪಡೆದುಕೊಂಡರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರು, ಸಹಾಯಕ ಆಯುಕ್ತ ಹೇಮಂತ್ ಕುಮಾರ್ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.