BP NEWS: ಬಳ್ಳಾರಿ: ಆಗಸ್ಟ್.07:
ಜಿಲ್ಲೆಯ ಕುರುಗೋಡು ತಾಲೂಕಿನ ದಮ್ಮೂರು ಗ್ರಾಮವನ್ನು ‘ತಂಬಾಕು ಮುಕ್ತ ಗ್ರಾಮ’ವನ್ನಾಗಿ ಘೋಷಿಸಲಾಗಿದೆ.
ಅಪರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದ ರಾಷ್ಟ್ರೀಯ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು. ಅದರಂತೆ, ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ.ಮರಿಯಂಬಿ.ವಿ.ಕೆ ಅವರ ನಿರ್ದೇಶನದಂತೆ ದಮ್ಮೂರು ಗ್ರಾಮ ಪಂಚಾಯಿತಿಯಲ್ಲಿ ಶನಿವಾರದಂದು ತಂಬಾಕು ಮುಕ್ತ ಹಳ್ಳಿಯ ಬಗ್ಗೆ ಪೂರ್ವಭಾವಿ ಸಭೆ ನಡೆಯಿತು.
ದಮ್ಮೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಲಕ್ಷ್ಮೀ ಅವರ ಅಧ್ಯಕ್ಷತೆಯಲ್ಲಿ ತಂಬಾಕು ಮುಕ್ತ ಗ್ರಾಮವನ್ನಾಗಿ ಮಾಡಲು ಬೇಕಾದ ಕ್ರಿಯಾಯೋಜನೆ ರೂಪಿಸಲಾಯಿತು.
ಸಭೆಯಲ್ಲಿ ದಮ್ಮೂರು ಗ್ರಾಮದ ಪಿಡಿಒ ಮಲ್ಲಿಕಾರ್ಜುನ ಅವರು ಮಾತನಾಡಿ, ಗ್ರಾಮದ ಅಂಗಡಿಗಳಲ್ಲಿ ಮಾರಾಟ ಮಾಡುವಂತಹ ತಂಬಾಕು ಉತ್ಪನ್ನಗಳ ಬಗ್ಗೆ ನಿಗಾ ವಹಿಸಬೇಕು. ಮನೆಗಳಲ್ಲಿಯೂ ಯಾರೂ ಬಳಸದಂತೆ ನೋಡಿಕೊಳ್ಳಬೇಕು. ಇದಕ್ಕೆ ಇತರೆ ಇಲಾಖೆಯ ಅಧಿಕಾರಿಗಳು ಕೈಜೋಡಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ತಂಬಾಕು ನಿಷೇಧ ಕುರಿತು ಜಾಗೃತಿ ಕರಪತ್ರ ಬಿಡುಗಡೆ ಮಾಡಲಾಯಿತು.
ಈ ಸಂದರ್ಭದಲ್ಲಿ ಗ್ರಾಪಂನ ಉಪಾಧ್ಯಕ್ಷ ಗೋಪಾಲ್‍ರಾವ್, ತಂಬಾಕು ನಿಯಂತ್ರಣ ಕೋಶದ ಎಸ್.ಭೋಜರಾಜ, ಹಿರಿಯ ಆರೋಗ್ಯ ನಿರೀಕ್ಷಕ ಗೋವಿಂದಪ್ಪ ಸೇರಿದಂತೆ ಗ್ರಾಮ ಪಂಚಾಯತ್ ಸದಸ್ಯರು, ಅಂಗನವಾಡಿ ಮೇಲ್ವಿಚಾರಕರು, ಸಮುದಾಯ ಆರೋಗ್ಯಾಧಿಕಾರಿಗಳು, ಹಿರಿಯ ಆರೋಗ್ಯ ನಿರೀಕ್ಷಕರು, ಪ್ರೌಢಶಾಲಾ ಮತ್ತು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಗುರುಗಳು ಹಾಗೂ ಅಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.