ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ವಿಧಿವಶ

0
106

BP NEWS: ಬೆಂಗಳೂರು, ಡಿಸೆಂಬರ್‌ 08: ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ(86) ವಿಧಿವಶರಾಗಿದ್ದಾರೆ. ಕಳೆದ ಕೆಲವು ತಿಂಗಳಿಂದ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದ ಲೀಲಾವತಿ ಅವರು ನೆಲಮಂಗಲ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ಸಂಜೆ ಕೊನೆಯುಸಿರೆಳೆದಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಜನಿಸಿದ ನಟಿ ಲೀಲಾವತಿ ನಾಟಕ, ರಂಗಭೂಮಿ ಬಗೆಗೆ ಚಿಕ್ಕವಯಸ್ಸಿನಲ್ಲೇ ಆಸಕ್ತಿ ಹೊಂದಿದ್ದರು. 600ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದ ನಟಿ ಲೀಲಾವತಿ 50 ವರ್ಷಗಳ ಕಾಲ ಚಿತ್ರರಂಗಕ್ಕೆ ಲೀಲಾವತಿ ಸೇವೆ ಸಲ್ಲಿಸಿದ್ದಾರೆ. ಕನ್ನಡ ಚಿತ್ರರಂಗದ ನಟ ದಿಗ್ಗಜರಾದ ಡಾ. ರಾಜ್​ಕುಮಾರ್​, ವಿಷ್ಣುವರ್ಧನ್​ ಅಂತವರ ಜೊತೆ ನಟಿಸಿ ಅಭಿಮಾನಿಗಳ ಮನಸ್ಸು ಗೆದ್ದು, ಸೈ ಎನಿಸಿಕೊಂಡಿದ್ದರು. ನಟನೆ ಮಾತ್ರವಲ್ಲದೇ ಸಾಮಾಜಿಕ ಕೆಲಸಗಳ ಮೂಲಕವೂ ಲೀಲಾವತಿ ಗುರುತಿಸಿಕೊಂಡಿದ್ದರು.

ಲೀಲಾವತಿ ಅವರು ತಮ್ಮ 50 ವರ್ಷಗಳ ವೃತ್ತಿಜೀವನದಲ್ಲಿ 600ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ನಟಿಸಿದ್ದಾರೆ. ‘ಭಕ್ತ ಕುಂಬಾರ’, ‘ಮನ ಮೆಚ್ಚಿದ ಮಡದಿ’ ಮತ್ತು ‘ಸಂತ ತುಕಾರಂ’ ಚಿತ್ರಗಳಲ್ಲಿನ ಸ್ಮರಣೀಯ ನಟನೆ ಅವರಿಗೆ ಹೆಚ್ಚಿನ ಜನಪ್ರಿಯತೆ ತಂದುಕೊಟ್ಟಿತ್ತು. ರಾಜಕುಮಾರ್ ಅವರ ಮಗಳಾಗಿ (‘ಭೂದಾನ’ದಲ್ಲಿ), ತಂಗಿಯಾಗಿ (‘ವಾತ್ಸಲ್ಯ’ದಲ್ಲಿ), ಅತ್ತಿಗೆಯಾಗಿ (‘ಪ್ರೇಮಮಯಿ’ಯಲ್ಲಿ) ಸೇರಿದಂತೆ ಹಲವು ಚಿತ್ರಗಳಲ್ಲಿ ರಾಜ್‌ಕುಮಾರ್ ಅವರೊಂದಿಗೆ ಕೆಲಸ ಮಾಡುವ ಅವಕಾಶವೂ ಅವರಿಗೆ ಸಿಕ್ಕಿತು. ಲೀಲಾವತಿ ಅವರ ಮಗ ವಿನೋದ್ ರಾಜ್ ಕೂಡ ನಟನಾಗಿದ್ದು, ‘ಡ್ಯಾನ್ಸ್ ರಾಜಾ ಡ್ಯಾನ್ಸ್’, ‘ಕೃಷ್ಣಾ ನೀ ಕುಣಿದಾಗ’, ‘ಕಾಲೇಜ್ ಹೀರೋ’ ಮತ್ತು ‘ಮಹಾಭಾರತ’ ಸೇರಿದಂತೆ ಹಲವು ಚಿತ್ರಗಳಲ್ಲಿ ಜೊತೆಯಾಗಿ ನಟಿಸಿದ್ದಾರೆ.

ಹಿರಿಯ ನಟಿ ಲೀಲಾವತಿ ಅವರ ಅಗಲಿಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರ ಅಗಲಿಕೆಯ ಸುದ್ದಿ ನೋವುಂಟು ಮಾಡಿದೆ. ಕಳೆದ ವಾರವಷ್ಟೇ ಅವರು ಅನಾರೋಗ್ಯಕ್ಕೀಡಾದ ವಿಚಾರ ತಿಳಿದು ಅವರ ಮನೆಗೆ ಭೇಟಿನೀಡಿ ಆರೋಗ್ಯ ವಿಚಾರಿಸಿ ಪುತ್ರ ವಿನೋದ್ ರಾಜ್ ಅವರೊಂದಿಗೆ ಮಾತನಾಡಿದ್ದೆ. ಹಲವು ದಶಕಗಳ ಕಾಲ ತಮ್ಮ‌ ಮನೋಜ್ಞ ಅಭಿನಯದ ಮೂಲಕ ಪ್ರೇಕ್ಷಕರನ್ನು ರಂಜಿಸಿದ್ದ ಲೀಲಾವತಿ ಅವರು ಗುಣಮುಖರಾಗಿ ಇನ್ನಷ್ಟು ಕಾಲ ನಮ್ಮ ನಡುವೆ ಇರುತ್ತಾರೆಂಬ ನನ್ನ ನಂಬಿಕೆ ಹುಸಿಯಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬ ವರ್ಗಕ್ಕೆ ಈ ದುಃಖವನ್ನು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಿಎಂ ಸಂತಾಪ ಸೂಚಿಸಿದ್ದಾರೆ.

LEAVE A REPLY

Please enter your comment!
Please enter your name here