BP NEWS: ಬಳ್ಳಾರಿ: ಜನವರಿ.24:
ಸಮಾಜದಲ್ಲಿ ಹೆಣ್ಣು ಮಕ್ಕಳು ಎಲ್ಲಾ ಕ್ಷೇತ್ರಗಳಲ್ಲಿ ಸರಿ-ಸಮಾನವಾಗಿ ಬೆಳೆಯುತ್ತಿದ್ದಾರೆ. ಇದು ಹೆಮ್ಮೆಯ ವಿಷಯವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆದ ಎಸ್.ಹೆಚ್.ಪುಷ್ಪಾಂಜಲಿ ದೇವಿ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಆಸ್ಪತ್ರೆ ಇವರ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಪ್ರಯುಕ್ತ ಬೇಟಿ ಬಚಾವೋ ಬೇಟಿ ಪಡಾವೋ ಅಭಿಯಾನ 2023-24 ದಡಿ ಜಿಲ್ಲಾ ಆಸ್ಪತ್ರೆ ಆವರಣದ ಜಿಲ್ಲಾ ಶಸ್ತ್ರ ಚಿಕಿತ್ಸಕರ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ “ಹೆಣ್ಣು ಮಗುವಿನ ಜನ್ಮೋತ್ಸವ” ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಹೆಣ್ಣು ಮಾತೃ ಸ್ವರೂಪಿಯಾಗಿದ್ದು, ಈಗಿನ ಆಧುನಿಕ ವಾಸ್ತವಿಕತೆಯಲ್ಲಿ ಹೆಣ್ಣು ಮನಸ್ಸು ಮಾಡಿದರೆ, ಏನನ್ನಾದರೂ ಸಾಧಿಸಬಹುದು. ಹೆಣ್ಣು ಮಕ್ಕಳನ್ನು ಉಳಿಸಿ, ಓದಿಸಬೇಕು ಎಂದು ತಿಳಿಸಿದರು.
ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ರಾಷ್ಟ್ರದ ರಾಷ್ಟ್ರಪತಿಯವರು ಮತ್ತು ನಮ್ಮ ಜಿಲ್ಲೆಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರೂ ಹೆಣ್ಣು ಎಂದು ಪ್ರಶಂಸೆ ವ್ಯಕ್ತಪಡಿಸಿದರು.
ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ಎಲ್ಲರಿಗೂ ಸಮಾನ ಅವಕಾಶವಿದೆ. ಸದಾವಕಾಶ ಬಳಸಿಕೊಂಡು ಪ್ರತಿಯೊಬ್ಬರೂ ತಮ್ಮದೇ ಆದ ಆತ್ಮಸ್ಥೈರ್ಯದಿಂದ ಮುನ್ನಡೆಯಬೇಕು ಎಂದು ಕಿವಿಮಾತು ಹೇಳಿದರು.
ಜಿಲ್ಲೆಯಲ್ಲಿ ಪಿಸಿ, ಪಿಎನ್‍ಡಿಟಿ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲಾಗುವುದು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಹೊರತಂದ ಭಿತ್ತಿಪತ್ರ ಬಿಡುಗಡೆಗೊಳಿಸಿದರು. ಕಾರ್ಯಕ್ರಮದಲ್ಲಿ ಬಾಣಂತಿಯರಿಗೆ ಸಾಮಾಗ್ರಿ ಕಿಟ್ ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವಿಜಯ್‍ಕುಮಾರ್.ಕೆ.ಹೆಚ್., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೈ.ರಮೇಶ್‍ಬಾಬು, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಬಸರೆಡ್ಡಿ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಎ.ಕೆ.ಜಲಾಲಪ್ಪ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರಾಮಕೃಷ್ಣ ನಾಯಕ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಜಿಲ್ಲಾಸ್ಪತ್ರೆಯ ವೈದ್ಯಾಧಿಕಾರಿಗಳು, ಸಿಬ್ಬಂದಿಗಳು ಹಾಗೂ ತಾಯಂದಿರು, ಇನ್ನಿತರರು ಉಪಸ್ಥಿತರಿದ್ದರು.