BP NEWS Karnataka: ಬಳ್ಳಾರಿ: ಜೂನ್.20:
ರಾಜ್ಯದಲ್ಲಿ ಸಾರಿಗೆ ಬಸ್ ಪ್ರಯಾಣ ದರ ಹೆಚ್ಚಳ ಮಾಡುವ ವಿಷಯ ಸದ್ಯ ಸರ್ಕಾರದ ಮುಂದೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.
ಜಿಲ್ಲೆಯ ತೋರಣಗಲ್‍ನ ಜಿಂದಾಲ್ ಏರ್‍ಪೋರ್ಟ್‍ನಲ್ಲಿ ಗುರುವಾರ ಸಂಜೆ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಡೀಸೆಲ್ ಪೆಟ್ರೋಲ್ ದರ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಸಾರಿಗೆ ಬಸ್ ದರ ಹೆಚ್ಚಳ ಮಾಡಲಾಗುತ್ತದೆಯೇ ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು, ಬಸ್ ಪ್ರಯಾಣ ದರ ಏರಿಕೆ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದರು.
ಈ ವರ್ಷ ಗ್ಯಾರಂಟಿ ಯೋಜನೆಗಳಿಗಾಗಿ 60 ಸಾವಿರ ಕೋಟಿ ಅನುದಾನ ಮೀಸಲಿರಿಸಿದ್ದು, ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಇನ್ನಷ್ಟು ಅಭಿವೃದ್ಧಿಯಾಗಲಿದೆ ಎಂದರು.
ತುಂಗಭದ್ರಾ ಜಲಾಶಯದಲ್ಲಿನ ಹೂಳಿನ ಸಮಸ್ಯೆ ಪರಿಹರಿಸಲು ಕೊಪ್ಪಳ ಜಿಲ್ಲೆ ನವಲಿ ಬಳಿ ಸಮಾನಾಂತರ ಜಲಾಶಯ ನಿರ್ಮಿಸುವ ಕುರಿತು ನೆರೆಯ ಆಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಮಾತುಕತೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದರು.
ಶಾಲೆಗಳಲ್ಲಿ ಎಲ್‍ಕೆಜಿ, ಯುಕೆಜಿ ಪ್ರಾರಂಭಕ್ಕೆ ಅಂಗನವಾಡಿ ಕಾರ್ಯಕರ್ತೆಯರು ವಿರೋಧ ವ್ಯಕ್ತಪಡಿಸಿದ್ದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ, ಸಮಸ್ಯೆ ಬಗೆಹರಿಸಲಾಗುವುದು ಎಂದು ಹೇಳಿದರು.
ಪೆಟ್ರೋಲ್ ಡೀಸೆಲ್ ಬೆಲೆ ಹೆಚ್ಚಳ ಮಾಡಿರುವುದು ರಾಜ್ಯದ ಸಮಗ್ರ ಅಭಿವೃದ್ಧಿಗೋಸ್ಕರವೇ ಹೊರತು ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕಾಗಿ ಅಲ್ಲ ಎಂದರು.
ಕಾರ್ಮಿಕ ಸಚಿವ ಸಂತೋಷ್ ಲಾಡ್, ಸಂಸದ ಈ. ತುಕಾರಾಂ, ಕೆಎಂಎಫ್ ಅಧ್ಯಕ್ಷ ಭೀಮಾ ನಾಯಕ್, ಕೂಡ್ಲಿಗಿ ಶಾಸಕ ಎನ್.ಟಿ. ಶ್ರೀನಿವಾಸ್ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.