BP NEWS Karnataka: ಬಳ್ಳಾರಿ: ಜುಲೈ.05:
ಸಾರ್ವಜನಿಕರ ಸುಸ್ಥಿರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಗ್ರಾಮೀಣ ಪ್ರದೇಶಗಳಲ್ಲಿನ ಕುಡಿಯುವ ನೀರಿನ ಶುದ್ಧೀಕರಣಗಳ ಘಟಕಗಳನ್ನು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಪರಿಶೀಲಿಸಬೇಕು ಎಂದು ಜಿಲ್ಲಾ ಪಂಚಾಯತ್‍ನ ಉಪ ಕಾರ್ಯದರ್ಶಿ ಗಿರಿಜಾ ಶಂಕರ್ ಅವರು ಸೂಚಿಸಿದರು.
ಜಿಲ್ಲಾ ಪಂಚಾಯತ್, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಇವರ ಸಹಯೋಗದಲ್ಲಿ ನಗರದ ಜಿಲ್ಲಾ ಪಂಚಾಯತ್‍ನ ನಜೀರ್‍ಸಾಬ್ ಸಭಾಂಗಣದಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಕ್ಷೇತ್ರ ಪರೀಕ್ಷಾ ಕಿಟ್(ಎಫ್‍ಟಿಕೆ) ಮತ್ತು ಹೆಚ್2ಎಸ್ ವಿಐಎಎಲ್‍ಎಸ್ ಸಾಧನಗಳನ್ನು ಉಪಯೋಗಿಸಿ ನೀರಿನ ಪರೀಕ್ಷೆ ಕೈಗೊಳ್ಳುವ ವಿಷಯವಾಗಿ ಗ್ರಾಪಂನ ಪಿಡಿಓಗಳಿಗೆ ಶುಕ್ರವಾರ ಏರ್ಪಡಿಸಿದ್ದ ತರಬೇತಿ ಕಾರ್ಯಗಾರದಲ್ಲಿ ಅವರು ಮಾತನಾಡಿದರು.
ಗ್ರಾಮೀಣ ಭಾಗದಲ್ಲಿ ಕಲುಷಿತ ನೀರು ಸೇವನೆಯಿಂದ ಜನ ಸಾಮಾನ್ಯರು ಅನಾರೋಗ್ಯಕ್ಕೆ ತುತ್ತಾಗುತ್ತಿದ್ದು, ನೀರಿನ ಮೂಲಗಳನ್ನು ಪರಿಶೀಲನೆ ಕೈಗೊಂಡು ಪರೀಕ್ಷೆಗೆ ಒಳಪಡಿಸಬೇಕು ಎಂದು ತಿಳಿಸಿದರು.
ಮಳೆಗಾಲ ಆರಂಭವಾಗಿದ್ದು, ಕಲುಷಿತ ನೀರು ಸೇವನೆಯಿಂದ ಆರೋಗ್ಯದ ಮೇಲೆ ಗಂಭೀರ ಸ್ವರೂಪದ ಪರಿಣಾಮಗಳು ಬೀರುವ ಸಾಧ್ಯತೆಗಳಿರುವುದರಿಂದ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಮುಂಜಾಗ್ರತಾ ಕ್ರಮವಾಗಿ ಕುಡಿಯುವ ನೀರನ್ನು ಪರೀಕ್ಷೆಗೆ ಒಳಪಡಿಸಿ, ಕಲುಷಿತವಾಗಿದ್ದಲ್ಲಿ ತಕ್ಷಣ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಗ್ರಾಮಗಳಲ್ಲಿ ಕುಡಿಯುವ ನೀರಿನ ಪೈಪ್ ಒಡೆದು ಹೋಗಿದ್ದರೆ ದುರಸ್ಥಿ ಮಾಡಿಸುವ ಸಂದರ್ಭದಲ್ಲಿ ಸುರಕ್ಷಿತವಾಗಿ ಕೆಲಸ ನಿರ್ವಹಿಸಬೇಕು. ಶುದ್ಧ ಕುಡಿಯುವ ನೀರಿನ ಬಗ್ಗೆ ಸಾರ್ವಜನಿಕರ ಸಹಭಾಗಿತ್ವದಲ್ಲಿ ಜಾಗೃತಿ ಮೂಡಿಸುವ ಕೆಲಸವಾಗಬೇಕು ಎಂದರು.
ಗ್ರಾಮ ಪಂಚಾಯಿತಿಗಳಲ್ಲಿ ಕಡ್ಡಾಯವಾಗಿ ಕ್ಷೇತ್ರ ಪರೀಕ್ಷಾ ಕಿಟ್ ಬಳಕೆ ಮಾಡಿಕೊಳ್ಳಬೇಕು ಹಾಗೂ ಗ್ರಾಮೀಣ ನೀರು ಮತ್ತು ನೈರ್ಮಲ್ಯ ಸಮಿತಿಗಳ ಪುನರ್ ರಚನೆ ಮಾಡಿ ಪ್ರತಿ ಗ್ರಾಮದಲ್ಲಿ ನೀರು ಮತ್ತು ನೈರ್ಮಲ್ಯ ಸಮಿತಿಗಳು ಕಾರ್ಯ ಚುರುಕುಗೊಂಡಿರಬೇಕು ಎಂದು ತಿಳಿಸಿದರು.
ಈ ವೇಳೆ ಗ್ರಾಮೀಣ ಪ್ರದೇಶದ ಪ್ರತಿ ಗ್ರಾಮದಲ್ಲಿ ಕುಡಿಯುವ ನೀರು ಬಗ್ಗೆ ಜಾಗೃತಿ ಮೂಡಿಸುವ ಭಿತ್ತಿ ಪತ್ರ ಮತ್ತು ಕ್ಷೇತ್ರ ಪರೀಕ್ಷಾ ಕಿಟ್ ಉಪಯೋಗಿಸಿ ನೀರು ಪರೀಕ್ಷೆ ಮಾಡುವ ಕೈಪಿಡಿಯನ್ನು ಬಿಡುಗಡೆಗೊಳಿಸಲಾಯಿತು.
ತದನಂತರ ನೀರು ಪರೀಕ್ಷೆ ಪ್ರಯೋಗಾಲಯದ ಸಿಬ್ಬಂದಿಗಳು, ನೀರು ಪರೀಕ್ಷೆ ಮಾಡಿಸಿ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್‍ನ ಮುಖ್ಯ ಯೋಜನಾಧಿಕಾರಿ ವಾಗೇಶ್ ಶಿವಾಚಾರ್ಯ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯ ಪಾಲಕ ಅಭಿಯಂತರ ಇಂದುಧರ್, ಮುಖ್ಯ ಲೆಕ್ಕಾಧಿಕಾರಿ ವಿನೋದ್, ಜಿಲ್ಲಾ ಯೋಜನಾ ವ್ಯವಸ್ಥಾಪಕ ತಿಪ್ಪೇಸ್ವಾಮಿ.ಹೆಚ್ ಸೇರಿದಂತೆ ಜಿಪಂನ ಅಧಿಕಾರಿ ಸಿಬ್ಬಂದಿ ಹಾಗೂ ಜಿಲ್ಲೆಯ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಸಿಬ್ಬಂದಿಯವರು ಉಪಸ್ಥಿತರಿದ್ದರು.