ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ನಿಮಿತ್ತ ನಡವಿ ಗ್ರಾಮದಲ್ಲಿ ಬಳ್ಳಾರಿ ಡಿಸಿ ಗ್ರಾಮವಾಸ್ತವ್ಯ

0
125

BP NEWS: ಬಳ್ಳಾರಿ: ನವೆಂಬರ್.19: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ನಿಮಿತ್ತ ಬಳ್ಳಾರಿ ಜಿಲ್ಲಾಧಿಕಾರಿ ಪವನ್‍ಕುಮಾರ ಮಾಲಪಾಟಿ ಅವರು ಸಿರುಗುಪ್ಪ ತಾಲೂಕಿನ ತೆಕ್ಕಲಕೋಟೆ ಹೋಬಳಿಯ ನಡವಿ ಗ್ರಾಮದಲ್ಲಿ ಶನಿವಾರ ಗ್ರಾಮವಾಸ್ತವ್ಯ ನಡೆಸಿದರು.
ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಅಭಿಯಾನದ ನಿಮಿತ್ತ ಜಿಲ್ಲಾಧಿಕಾರಿ ಪವನಕುಮಾರ ಮಾಲಪಾಟಿ ಅವರು ಗ್ರಾಮದ ಪ್ರತಿ ಮನೆಗೂ ಭೇಟಿ ನೀಡಿ ಜನರ ಸಮಸ್ಯೆಗಳನ್ನು ಆಲಿಸಿದರು. ಮತ್ತು ಗ್ರಾಮದೆಲ್ಲೆಡೆ ಸಂಚರಿಸಿ ರಸ್ತೆಗಳು, ಚರಂಡಿ, ಕುಡಿಯುವ ನೀರಿನ ಶುದ್ಧೀಕರಣ ಘಟಕ, ಆಸ್ಪತ್ರೆ, ಸ್ವಚ್ಛತೆ ಹಾಗೂ ಇನ್ನಿತರ ಮೂಲಸೌಕರ್ಯ ವ್ಯವಸ್ಥೆಯನ್ನು ಖುದ್ದಾಗಿ ಪರಿಶೀಲಿಸಿ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳು ನೀಡಿದರು.


ಗ್ರಾಮವಾಸ್ತವ್ಯ ನಡೆಸುವುದಕ್ಕಿಂತ ಮುಂಚೆಯೇ ಗ್ರಾಮಕ್ಕೆ ತಹಸೀಲ್ದಾರ್ ಸೇರಿದಂತೆ ಕಂದಾಯ ಇಲಾಖೆಯ ಅಧಿಕಾರಿಗಳನ್ನು ಕಳುಹಿಸಿ ಪಿಂಚಣಿ, ಪಹಣಿ, ದಾಖಲೆಗಳ ತಿದ್ದುಪಡಿ, ರೇಶನ್ ಕಾರ್ಡ್ ಸಮಸ್ಯೆಗಳನ್ನು ಪಟ್ಟಿ ಮಾಡಿಕೊಂಡು ಬಗೆಹರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪವನ್‍ಕುಮಾರ ಮಾಲಪಾಟಿ ಅವರು ತಿಳಿಸಿದರು.
ಬಹುತೇಕವಾಗಿ ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಸಮಸ್ಯೆಗಳಾದ ಪಹಣಿಯಲ್ಲಿನ ಲೋಪದೋಷಗಳು, ಪೌತಿ ಖಾತೆಗಳು, ಇನಾಂ ಭೂಮಿಗಳ ಪಟ್ಟಾ ಮಂಜೂರಾತಿ, ವೃದ್ಧಾಪ್ಯ ವೇತನ, ಮಾಸಿಕ ವೇತನಗಳ, ಪಡಿತರ ಚೀಟಿಗಳಿಗೆ ಸಂಬಂಧಿಸಿದಂತೆ ಸ್ಥಳದಲ್ಲಿಯೇ ಬಗೆಹರಿಸುವುದೇ ಈ ಗ್ರಾಮವಾಸ್ತವ್ಯದ ಮುಖ್ಯ ಉದ್ದೇಶವಾಗಿದೆ ಎಂದು ಹೇಳಿದರು.
ಸಾಮಾನ್ಯವಾಗಿ ಗ್ರಾಮದಲ್ಲಿ ರಸ್ತೆ ದುರಸ್ತಿ, ಚರಂಡಿ ಸರಿಪಡಿಸುವಿಕೆ, ಚರಂಡಿ ನೀರು ಹೋಗದಂತೆ ವ್ಯವಸ್ಥೆ, ಬೀದಿದೀಪಗಳ ಆಳವಡಿಕೆ, ಗ್ರಾಮ ಸ್ವಚ್ಛತೆ ಸೇರಿದಂತೆ ವಿವಿಧ ಸಮಸ್ಯೆಗಳನ್ನು ಗ್ರಾಮಸ್ಥರು ಜಿಲ್ಲಾಧಿಕಾರಿಗಳೆದುರು ಪ್ರಸ್ತಾಪಿಸಿದರು.


ಗ್ರಾಮದಲ್ಲಿ ಪ್ರವಾಹದಿಂದಾಗಿ ಮನೆ ಕಳೆದು ಕೊಂಡವರಿಗೆ 363 ಮನೆಗಳ ನಿರ್ಮಾಣಕ್ಕೆ ಆದೇಶವಾಗಿದ್ದು ಕೇವಲ 168 ಮನೆಗಳು ನಿರ್ಮಾಣವಾಗಿವೆ, ಉಳಿದ ಬಡ ಕುಟುಂಬಗಳು ಮನೆ ನಿರ್ಮಾಣವನ್ನು ಎದುರು ನೋಡುವಂತಾಗಿದೆ, ಗ್ರಾಮದ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಆಗಿಲ್ಲವೆಂದು ಗ್ರಾಮಸ್ಥರು ಅಳಲು ತೋಡಿಕೊಂಡರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಪವನ್‍ಕುಮಾರ್ ಮಾಲಪಾಟಿ ಅವರು ಶಾಸಕರ ಜತೆ ಚರ್ಚಿಸಿ ಮೂರು ತಿಂಗಳೊಳಗೆ ಸಮಸ್ಯೆ ಬಗೆಹರಿಸಲಾಗುವುದು ಎಂದರು.
ನಂತರ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಪಡಿತರ ಚೀಟಿ, ಸಾಮಾಜಿಕ ಭದ್ರತಾ ಯೋಜನೆಗೆ ಸಂಬಂಧಿಸಿದ ವಿವಿಧ ಅದೇಶಗಳನ್ನು ವಿತರಿಸಿದರು. ಹಾಗೂ ಇದೇ ಸಂದರ್ಭದಲ್ಲಿ ಗ್ರಾಮಸ್ಥರಿಂದ ಮನವಿ ಪತ್ರಗಳನ್ನು ಸ್ವೀಕರಿಸಿದರು.
ಎಲ್ಲರ ಅಹವಾಲುಗಳನ್ನು ಸಮಾಧಾನದಿಂದ ಆಲಿಸಿದ ಡಿಸಿ ಮಾಲಪಾಟಿ ಅವರು ತಮ್ಮ ಸಮಸ್ಯೆಗಳನ್ನು ಶೀಘ್ರ ಪರಿಹರಿಸಲಾಗುವುದು ಎಂದು ಜನರಿಗೆ ಅಶ್ವಾಸನೆ ನೀಡಿದರು.
ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಅಭಿಯಾನದ ನಿಮಿತ್ತ ವೇದಿಕೆ ಆವರಣದಲ್ಲಿ ಹಾಕಲಾಗಿದ್ದ ವಿವಿಧ ಇಲಾಖೆಗಳ ವಸ್ತುಪ್ರದರ್ಶನ ಗಮನಸೆಳೆಯಿತು.


ಈ ಸಂದರ್ಭದಲ್ಲಿ ಶಾಸಕ ಸೋಮಲಿಂಗಪ್ಪ, ಗ್ರಾಪಂ ಅಧ್ಯಕ್ಷೆ ಮಾಳಮ್ಮ, ಗ್ರಾಪಂ ಉಪಾಧ್ಯಕ್ಷ ಹುಲುಗಪ್ಪ, ಜಿಪಂ ಸಿಇಒ ಜಿ.ಲಿಂಗಮೂರ್ತಿ, ಎಡಿಸಿ ಮಂಜುನಾಥ, ತಾಪಂ ಇಒ ಮಡಗಿನ ಬಸಪ್ಪ, ತಹಶೀಲ್ದಾರ ಮಂಜುನಾಥ ಸ್ವಾಮಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಗ್ರಾಪಂ ಸದಸ್ಯರುಗಳು ಇದ್ದರು.

LEAVE A REPLY

Please enter your comment!
Please enter your name here