BP NEWS: ಬೆಂಗಳೂರು: ಫೆಬ್ರವರಿ.15: ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ, ಮಾಜಿ ಸಚಿವ ಜನಾರ್ದನ ರೆಡ್ಡಿ ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡಿದರು. ಕೊಪ್ಪಳ ಜಿಲ್ಲೆಯ ಗಂಗಾವತಿ ಕ್ಷೇತ್ರದಿಂದ ಅವರು ಚುನಾವಣೆಗೆ ಸ್ಪರ್ಧೆ ಮಾಡಲಿದ್ದಾರೆ.
ಮಂಗಳವಾರ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಬೃಹತ್ ಸಮಾವೇಶ ನಡೆಸಿದ ಜನಾರ್ದನ ರೆಡ್ಡಿ 2023ರ ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡಿದರು.
ಡಿಸೆಂಬರ್ 25ರಂದು ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದ ಜನಾರ್ದನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸ್ಥಾಪನೆ ಮಾಡುವುದಾಗಿ ಘೋಷಣೆ ಮಾಡಿದ್ದರು. ಉತ್ತರ ಕರ್ನಾಟಕ ಭಾಗದಲ್ಲಿ ಜನಾರ್ದನ ರೆಡ್ಡಿ ಈಗಾಗಲೇ ಬಿರುಸಿನಿಂದ ಪ್ರಚಾರವನ್ನು ಮಾಡುತ್ತಿದ್ದಾರೆ.
ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಪ್ರಣಾಳಿಕೆಯಲ್ಲಿ ರೈತರಿಗೆ, ಕೃಷಿಗೆ ಹೆಚ್ಚಿನ ಆದ್ಯತೆಯನ್ನು ನೀಡಲಾಗಿದೆ. ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇದೆ. ಏಪ್ರಿಲ್ ಅಂತ್ಯ ಅಥವ ಮೇ ತಿಂಗಳಿನಲ್ಲಿ ರಾಜ್ಯದಲ್ಲಿ ಚುನಾವಣೆ ನಡೆಯಲಿದೆ.
ರಾಯಚೂರಿನಲ್ಲಿ ಪ್ರಣಾಳಿಕೆ ಬಿಡುಗಡೆ
ಮಂಗಳವಾರ ಸಿಂಧನೂರಿಗೆ ಭೇಟಿ ನೀಡಿದ್ದ ಜನಾರ್ದನ ರೆಡ್ಡಿ ಅಂಬಾಮಠದಲ್ಲಿ ಪಾದಯಾತ್ರೆ ನಡೆಸಿದರು. ಅಲ್ಲಿಯೇ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು. ಸುಮಾರು 20 ಸಾವಿರ ಜನರು ಈ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದರು.
ನಂತರ ಮಾತನಾಡಿದ ಜನಾರ್ದನ ರೆಡ್ಡಿ, ‘ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ರೈತರಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ’ ಎಂದು ಹೇಳಿದರು.
ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಪ್ರಣಾಳಿಕೆ
ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಪ್ರಣಾಳಿಕೆಯಲ್ಲಿ ರೈತರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಪ್ರತಿ ವರ್ಷ ರೈತನ ಅಕೌಂಟ್‌ಗೆ 15 ಸಾವಿರ ರೂ. ಹಣ ಜಮಾ ಮಾಡಲಾಗುತ್ತದೆ ಎಂದು ಭರವಸೆ ನೀಡಿದ್ದಾರೆ.
ರೈತರ ಮನೆ ಬಾಗಿಲಿಗೆ ಅಧಿಕಾರಿಗಳು ಆಗಮಿಸಿ ಸಮಸ್ಯೆ ಆಲಿಸುವಂತೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪ್ರಣಾಳಿಕೆಯಲ್ಲಿ ಭರವಸೆ ನೀಡಲಾಗಿದೆ.
ಸರ್ಕಾರದ ಎಲ್ಲಾ ಯೋಜನೆಗಳನ್ನು ಮನೆ ಬಾಗಿಲಿಗೆ ತಲುಪಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜನಾರ್ದನ ರೆಡ್ಡಿ ಭರವಸೆ ಕೊಟ್ಟಿದ್ದಾರೆ.
ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಪ್ರಣಾಳಿಕೆಯಲ್ಲಿ ಪಕ್ಷ ಅಧಿಕಾರಕ್ಕೆ ಬಂದರೆ ನೀರಾವರಿ ಯೋಜನೆ ಸದೃಢಗೊಳಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಭರವಸೆ ನೀಡಲಾಗಿದೆ.
ಪಕ್ಷದ ಪ್ರಣಾಳಿಕೆಯಲ್ಲಿ ಸಕಾಲಕ್ಕೆ ರಸಗೊಬ್ಬರಗಳನ್ನು ರೈತರಿಗೆ ನೀಡಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಲಾಗಿದೆ.