BP NEWS: ಬಳ್ಳಾರಿ: ಜೂನ್.05:
ಮಾನವನು ಆಧುನಿಕ ಬದುಕಿನ ಗೀಳಿಗೆ ಬಿದ್ದು ಪರಿಸರವನ್ನು ನಿರಂತರವಾಗಿ ನಾಶ ಮಾಡುತ್ತಿದ್ದಾನೆ ಎಂದು ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಸಿದ್ದು ಪಿ. ಆಲಗೂರ ಹೇಳಿದರು.
ಇಲ್ಲಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ಕರ್ನಾಟಕ ಅರಣ್ಯ ಇಲಾಖೆಯ ಸಹಯೋಗದೊಂದಿಗೆ ವಿಶ್ವ ಪರಿಸರ ದಿನಾಚರಣೆ ನಿಮಿತ್ತ 50 ಕ್ಕೂ ಹೆಚ್ಚು ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ವಿಶ್ವ ಪರಿಸರ ದಿನಾಚರಣೆಯನ್ನು ವಿಶ್ವಾದ್ಯಂತ ಪರಿಸರದ ಬಗ್ಗೆ ಜಾಗೃತಿ ಮತ್ತು ಪರಿಸರ ರಕ್ಷಣೆ ಉತ್ತೇಜಿಸಲು ಆಚರಿಸಲಾಗುತ್ತದೆ. ಪ್ಲಾಸ್ಟಿಕ್ ಮಾಲಿನ್ಯ ತಡೆಗಟ್ಟುವುದು ಪ್ರಸಕ್ತ ವರ್ಷದ ಧ್ಯೇಯವ್ಯಾಖ್ಯವಾಗಿದೆ. ಭೂಮಿಯ ಮೇಲಿನ ಪ್ರತಿಯೊಂದು ಜೀವಿಗಳ ಪೋಷಣೆಯಲ್ಲಿ ಪರಿಸರ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಮನುಷ್ಯ ತನ್ನ ಅಭಿವೃದ್ಧಿಗಾಗಿ ತನಗೆ ಅರಿವಿಲ್ಲದೆ ಪರಿಸರವನ್ನು ಹಾಳುಮಾಡುತ್ತಿದ್ದಾನೆ. ಹೀಗಾಗಿ ಪ್ರತಿಯೊಬ್ಬರಲ್ಲೂ ಪರಿಸರದ ಬಗ್ಗೆ ಕಾಳಜಿ ಮೂಡಿಸಿ ಪರಿಸರ ಹಾಳಾಗದಂತೆ ಜಾಗೃತಿವಹಿಸುವುದು ಮುಖ್ಯ ಎಂದು ಹೇಳಿದರು.
ಈ ಸಂದರ್ಭದಲ್ಲಿ ವಿವಿಯ ಕುಲಸಚಿವರಾದ ಪ್ರೊ. ಎಸ್. ಸಿ. ಪಾಟೀಲ್, ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿಗಳಾದ ಡಾ.ಗೌರಿ ಮಾಣಕ್ ಮಾನಸ, ಕಾರ್ಯಕ್ರಮಾಧಿಕಾರಿಗಳಾದ ಡಾ.ಜ್ಯೋತಿಲಿಂಗ ವಿ. (ಘಟಕ ಎ) ಮತ್ತು ವಾತ್ಸಲ್ಯ ಆರ್. (ಘಟಕ ಬಿ) ಮತ್ತು ಅರಣ್ಯ ಇಲಾಖೆ ಬಳ್ಳಾರಿ ಪ್ರಾದೇಶಿಕ ವಿಭಾಗದ ಸಿಬ್ಬಂದಿ ಹಾಗೂ ವಿವಿಧ ವಿಭಾಗಗಳ ಮುಖ್ಯಸ್ಥರು, ಸಂಯೋಜಕರು, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.