‘ಮಲೆಯಾಳಿ ಭಾಷಾ ಮಸೂದೆ–2025’ ಸಂವಿಧಾನ ವಿರೋಧಿ: ಕೇರಳ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ಆಕ್ರೋಶ!

0
21
Advertisement

ಬೆಂಗಳೂರು, ಜ.09 :ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಲಿಕೆಯನ್ನು ಕಡ್ಡಾಯಗೊಳಿಸುವ ಕೇರಳ ಸರ್ಕಾರದ ಪ್ರಸ್ತಾಪಿತ ‘ಮಲೆಯಾಳಿ ಭಾಷಾ ಮಸೂದೆ–2025’ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಪತ್ರ ಬರೆದಿರುವ ಅವರು, ಮಸೂದೆ ಸಂವಿಧಾನ ಖಾತರಿ ಮಾಡಿರುವ ಭಾಷಾ ಸ್ವಾತಂತ್ರ್ಯದ ಮೇಲಿನ ನೇರ ಪ್ರಹಾರ ಎಂದು ಕಿಡಿಕಾರಿದ್ದಾರೆ.

ಈ ಮಸೂದೆ ಜಾರಿಗೆ ಬಂದರೆ ಕೇರಳದ ಗಡಿಜಿಲ್ಲೆಗಳಲ್ಲಿ, ವಿಶೇಷವಾಗಿ ಕಾಸರಗೋಡು ಪ್ರದೇಶದಲ್ಲಿ ವಾಸಿಸುವ ಕನ್ನಡಿಗರು ತಮ್ಮ ಮಾತೃಭಾಷೆಯಲ್ಲಿ ಕಲಿಯುವ ಹಕ್ಕಿನಿಂದ ವಂಚಿತರಾಗುವ ಅಪಾಯವಿದೆ ಎಂದು ಸಿಎಂ ಎಚ್ಚರಿಸಿದ್ದಾರೆ. ಭಾಷಾ ಅಲ್ಪಸಂಖ್ಯಾತರ ಮೂಲಭೂತ ಹಕ್ಕುಗಳನ್ನು ಹತ್ತಿಕ್ಕುವ ಇಂತಹ ಕ್ರಮವನ್ನು ಕೇರಳದ ಕಮ್ಯುನಿಸ್ಟ್ ಸರ್ಕಾರದಿಂದ ನಿರೀಕ್ಷಿಸಿರಲಿಲ್ಲ ಎಂದು ಅವರು ಹೇಳಿದ್ದಾರೆ.

ಕಾಸರಗೋಡು ಆಡಳಿತಾತ್ಮಕವಾಗಿ ಕೇರಳಕ್ಕೆ ಸೇರಿದ್ದರೂ, ಭಾವನಾತ್ಮಕವಾಗಿ ಕರ್ನಾಟಕದೊಂದಿಗೆ ನಂಟು ಹೊಂದಿದೆ ಎಂದು ಸಿದ್ದರಾಮಯ್ಯ ಒತ್ತಿಹೇಳಿದ್ದಾರೆ. ಅಲ್ಲಿನ ಜನರು ಕನ್ನಡ ಭಾಷೆ, ಸಂಸ್ಕೃತಿ ಮತ್ತು ಸಾಹಿತ್ಯದೊಂದಿಗೆ ಆಳವಾಗಿ ಮಿಳಿತವಾಗಿದ್ದು, ಅವರು ಕರ್ನಾಟಕದ ಕನ್ನಡಿಗರಿಗಿಂತ ಕಡಿಮೆ ಕನ್ನಡಿಗರಲ್ಲ. ಅವರ ಹಿತವನ್ನು ರಕ್ಷಿಸುವುದು ಕರ್ನಾಟಕ ಸರ್ಕಾರದ ಕರ್ತವ್ಯ ಎಂದು ಸ್ಪಷ್ಟಪಡಿಸಿದ್ದಾರೆ.

ಭಾಷಾ ಅಲ್ಪಸಂಖ್ಯಾತರಿಗೆ ಮಾತೃಭಾಷೆ ಕೇವಲ ಸಂವಹನದ ಸಾಧನವಲ್ಲ; ಅದು ಅಸ್ಮಿತೆ ಮತ್ತು ಘನತೆಯ ಬದುಕಿನ ಆಧಾರ ಎಂದು ಸಿಎಂ ಅಭಿಪ್ರಾಯಪಟ್ಟಿದ್ದಾರೆ. ಮಾತೃಭಾಷೆಯಲ್ಲಿ ಕಲಿಯುವ ಮಕ್ಕಳಿಗೆ ವಿಷಯಗ್ರಹಣ ಸುಲಭವಾಗುತ್ತದೆ ಎಂಬುದು ವೈಜ್ಞಾನಿಕವಾಗಿ ಸಾಬೀತಾಗಿದೆ. ಅನ್ಯಭಾಷೆಯನ್ನು ಹೇರಿಕೆಯಿಂದ ಮಕ್ಕಳ ಕಲಿಕಾ ಸಾಮರ್ಥ್ಯಕ್ಕೆ ಧಕ್ಕೆಯಾಗುವುದಲ್ಲದೆ, ಒಂದು ಸ್ವತಂತ್ರ ಭಾಷೆಯ ಅವಸಾನಕ್ಕೂ ದಾರಿ ಮಾಡಿಕೊಡುವ ಅಪಾಯವಿದೆ ಎಂದು ಎಚ್ಚರಿಸಿದ್ದಾರೆ.

ಕಾಸರಗೋಡಿನಲ್ಲಿ ಹಲವು ತಲೆಮಾರುಗಳಿಂದ ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ಪಡೆದಿರುವುದನ್ನು ಉಲ್ಲೇಖಿಸಿದ ಸಿಎಂ, ಜಿಲ್ಲೆಯ ಶೇಕಡಾ 70ರಷ್ಟು ವಿದ್ಯಾರ್ಥಿಗಳು ಕನ್ನಡ ಭಾಷೆಯಲ್ಲೇ ಕಲಿಯಲು ಇಚ್ಛಿಸುತ್ತಾರೆ ಎಂಬುದು ಅಲ್ಲಿನ ಕನ್ನಡಿಗರ ಒಕ್ಕೊರಲ ಅಭಿಪ್ರಾಯ ಎಂದು ತಿಳಿಸಿದ್ದಾರೆ. ಭಾರತವು ಬಹುಭಾಷೆ, ಬಹುಸಂಸ್ಕೃತಿ ಮತ್ತು ಬಹುಧರ್ಮಗಳ ತೊಟ್ಟಿಲಾಗಿದ್ದು, ಈ ಬಹುತ್ವಕ್ಕೆ ಧಕ್ಕೆ ತರುವ ಯಾವುದೇ ಪ್ರಯತ್ನ ಅಪಾಯಕಾರಿಯಾಗಿದೆ ಎಂದು ಹೇಳಿದ್ದಾರೆ.

ಸಂವಿಧಾನದ 29 ಮತ್ತು 30ನೇ ವಿಧಿಗಳು ಭಾಷೆ, ಲಿಪಿ ಮತ್ತು ಸಂಸ್ಕೃತಿ ರಕ್ಷಣೆಯ ಹಕ್ಕನ್ನು ನೀಡುತ್ತವೆ. 350(ಎ) ಪ್ರಾಥಮಿಕ ಹಂತದಲ್ಲಿ ಮಾತೃಭಾಷೆಯಲ್ಲಿ ಕಲಿಯುವ ಸ್ವಾತಂತ್ರ್ಯವನ್ನು, 350(ಬಿ) ಅಲ್ಪಸಂಖ್ಯಾತರ ರಕ್ಷಣೆಯನ್ನು ಖಚಿತಪಡಿಸುತ್ತವೆ. ಈ ಹಿನ್ನೆಲೆ ಯಾವುದೇ ಸರ್ಕಾರ ಭಾಷಾ ಅಲ್ಪಸಂಖ್ಯಾತರ ಹಕ್ಕುಗಳನ್ನು ಹತ್ತಿಕ್ಕಬಾರದು ಎಂದು ಸಿದ್ದರಾಮಯ್ಯ ಪತ್ರದಲ್ಲಿ ಆಗ್ರಹಿಸಿದ್ದಾರೆ.

Advertisement

LEAVE A REPLY

Please enter your comment!
Please enter your name here