ಮಾಜಿ ಉಪರಾಷ್ಟ್ರಪತಿ ಜಗದೀಪ್ ಧಂಖರ್ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು!

0
23
Advertisement

ನವದೆಹಲಿ, ಜ.13:ಮಾಜಿ ಉಪರಾಷ್ಟ್ರಪತಿ ಜಗದೀಪ್ ಧಂಖರ್ ಅವರ ಆರೋಗ್ಯದಲ್ಲಿ ಏರುಪೇರಾಗಿರುವ ಹಿನ್ನೆಲೆಯಲ್ಲಿ ಅವರನ್ನು ಸೋಮವಾರ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (AIIMS) ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಮೂಲಗಳ ಪ್ರಕಾರ, ಕಳೆದ ವಾರ ಧಂಖರ್ ಅವರು ಎರಡೆರಡು ಬಾರಿ ಪ್ರಜ್ಞೆ ಕಳೆದುಕೊಂಡಿದ್ದರು. ಜನವರಿ 10ರಂದು ಶೌಚಾಲಯಕ್ಕೆ ತೆರಳಿದ್ದ ಸಂದರ್ಭದಲ್ಲೇ ಅವರು ಎರಡು ಬಾರಿ ಅಚೇತನಗೊಂಡಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಿದ ವೈದ್ಯರು ತಕ್ಷಣ ವೈದ್ಯಕೀಯ ಪರೀಕ್ಷೆ ನಡೆಸುವಂತೆ ಸಲಹೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಅವರಿಗೆ ಎಂಆರ್‌ಐ ಸ್ಕ್ಯಾನ್ ಸೇರಿದಂತೆ ಸಮಗ್ರ ತಪಾಸಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

“ವೈದ್ಯರು ತಪಾಸಣೆಗಾಗಿ ಆಸ್ಪತ್ರೆಗೆ ದಾಖಲಿಸಿಕೊಳ್ಳುವಂತೆ ಒತ್ತಾಯಿಸಿದ ಹಿನ್ನೆಲೆಯಲ್ಲಿ ಧಂಖರ್ ಅವರು ಏಮ್ಸ್‌ ಗೆ ತೆರಳಿ ಪರೀಕ್ಷೆಗಳಿಗೆ ಒಳಪಟ್ಟಿದ್ದಾರೆ” ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಉಪರಾಷ್ಟ್ರಪತಿಯಾಗಿ ಸೇವೆ ಸಲ್ಲಿಸುವ ಅವಧಿಯಲ್ಲಿ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ವೇಳೆ ರಾನ್ ಆಫ್ ಕಚ್, ಉತ್ತರಾಖಂಡ, ಕೇರಳ ಹಾಗೂ ರಾಷ್ಟ್ರ ರಾಜಧಾನಿ ಸೇರಿದಂತೆ ವಿವಿಧ ಕಡೆಗಳಲ್ಲಿ ಧಂಖರ್ ಅವರು ತಮ್ಮ ಆರೋಗ್ಯ ಸಮಸ್ಯೆಯನ್ನು ಮರೆಮಾಚಿಕೊಂಡು ಕರ್ತವ್ಯ ನಿರ್ವಹಿಸಿದ್ದರು ಎನ್ನಲಾಗಿದೆ. ಆದರೆ ನಿರಂತರ ಆರೋಗ್ಯ ತೊಂದರೆಗಳ ಹಿನ್ನೆಲೆಯಲ್ಲಿ ಜುಲೈ 21ರಂದು ಅವರು ಉಪರಾಷ್ಟ್ರಪತಿ ಹುದ್ದೆಗೆ ರಾಜೀನಾಮೆ ನೀಡಿದ್ದರು.

ಇದಕ್ಕೂ ಮುನ್ನ 2025ರ ಮಾರ್ಚ್ ತಿಂಗಳಲ್ಲಿ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಧಂಖರ್ ಅವರನ್ನು ದೆಹಲಿ ಏಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಹೃದಯ ಶಸ್ತ್ರಚಿಕಿತ್ಸೆ ನಡೆಸಿ ಸ್ಟೆಂಟ್ ಅನ್ನು ಯಶಸ್ವಿಯಾಗಿ ಅಳವಡಿಸಲಾಗಿತ್ತು. ಚಿಕಿತ್ಸೆ ನಂತರ ಚೇತರಿಸಿಕೊಂಡ ಅವರನ್ನು ಮಾರ್ಚ್ 12, 2025ರಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿತ್ತು.

ಪ್ರಸ್ತುತ ಅವರ ಆರೋಗ್ಯ ಸ್ಥಿತಿಯನ್ನು ವೈದ್ಯರು ನಿಕಟವಾಗಿ ಗಮನಿಸುತ್ತಿದ್ದು, ಅಗತ್ಯ ತಪಾಸಣೆ ಮತ್ತು ಚಿಕಿತ್ಸೆಯನ್ನು ಮುಂದುವರಿಸಲಾಗುತ್ತಿದೆ ಎಂದು ತಿಳಿದುಬಂದಿದೆ.

Advertisement

LEAVE A REPLY

Please enter your comment!
Please enter your name here