BP NEWS: ಬಳ್ಳಾರಿ: ಡಿಸೆಂಬರ್.30:
ನಗರದಲ್ಲಿ ದಿನನಿತ್ಯದ ಸ್ವಚ್ಛತೆ ಸೇವೆ ಸೇರಿದಂತೆ ನಗರ ಸುಂದರೀಕರಣಕ್ಕೆ ಪೌರಕಾರ್ಮಿಕರ ಪಾತ್ರ ಅತ್ಯಗತ್ಯವಾಗಿದೆ ಎಂದು ಪರಿಶಿಷ್ಟ ಪಂಗಡಗಳ ಕಲ್ಯಾಣ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ನಾಗೇಂದ್ರ ಅವರು ಹೇಳಿದರು.
ಇಲ್ಲಿಯ ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ 132 ಪೌರಕಾರ್ಮಿಕರಿಗೆ ನೇಮಕಾತಿ ಆದೇಶ ಪತ್ರ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಬಳ್ಳಾರಿ ನಗರವನ್ನು ಸ್ವಚ್ಚ ಮತ್ತು ಸುಂದರವನ್ನಾಗಿ ಮಾಡಲು ಪಣ ತೊಟ್ಟಿದ್ದು, ಹಂತ ಹಂತವಾಗಿ ಪೌರ ಕಾರ್ಮಿಕರನ್ನು ನೇಮಕಾತಿ ಮಾಡಿಕೊಳ್ಳಲಾಗುವುದು. ಈಗಾಗಲೇ ಪಾಲಿಕೆಯಲ್ಲಿ ಕಾರ್ಯನಿರ್ವಹಿಸುತ್ತಿರುವ 341 ಪೌರಕಾರ್ಮಿಕರಲ್ಲಿ ಮೊದಲ ಹಂತವಾಗಿ 132 ಪೌರ ಕಾರ್ಮಿಕರಿಗೆ ನೇಮಕಾತಿ ಆದೇಶ ಪತ್ರಗಳನ್ನು ವಿತರಿಸಲಾಗುತ್ತಿದೆ ಎಂದರು.
ಖಾಯಂ ಉದ್ಯೋಗದ ಜೊತೆಗೆ ಭದ್ರತಾ ಸೇವೆ ಮತ್ತು ನೇಮಕಾತಿ ಆದೇಶ ಪತ್ರ ವಿತರಿಸಲಾಗಿದೆ. ಎರಡನೇ ಹಂತವಾಗಿ ಇನ್ನುಳಿದ ಪಾಲಿಕೆಯ ವಾಹನ ಚಾಲಕರು ಮತ್ತು ಪೌರಕಾರ್ಮಿಕರಿಗೆ ನೇಮಕಾತಿ ಆದೇಶ ಪತ್ರ ವಿತರಿಸಲಾಗುವುದು ಎಂದು ಹೇಳಿದರು.
ನೇಮಕಾತಿ ಪತ್ರ ಪಡೆದ ಎಲ್ಲಾ ಪೌರಕಾರ್ಮಿಕರು ಸಹ ತಮ್ಮ ಆರೋಗ್ಯದ ಕಡೆಗೆ ಗಮನ ನೀಡಬೇಕು. ಈ ದಿನ ಎಲ್ಲರ ಮುಖದಲ್ಲಿ ಮಂದಹಾಸವಿದೆ. ಬಹಳ ದಿನಗಳ ಬೇಡಿಕೆ ಈಗ ಈಡೇರಿದೆ. ಮುಂದಿನ ದಿನಗಳಲ್ಲಿ ಇನ್ನುಳಿದ ಪೌರಕಾರ್ಮಿಕರ ನೇಮಕಕ್ಕೆ ಕ್ರಮ ವಹಿಸಲಾಗುವುದು. ಯಾರೂ ಆತಂಕ ಪಡಬಾರದು ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ರಾಜ್ಯ ಸರ್ಕಾರದ 4 ಗ್ಯಾರಂಟಿ ಯೋಜನೆಗಳು ಸಕಾಲದಲ್ಲಿ ತಲುಪುತ್ತಿದೆಯೇ ಎಂದು ವಿಚಾರಿಸಿದರು. ನಂತರ 132 ಪೌರಕಾರ್ಮಿಕರಿಗೆ ನೇಮಕಾತಿ ಆದೇಶ ಪತ್ರ ವಿತರಣೆ ಮಾಡಿದರು.
ಈ ಸಂದರ್ಭದಲ್ಲಿ ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ, ಮಹಾನಗರ ಪಾಲಿಕೆ ಆಯುಕ್ತ ಜಿ.ಖಲೀಲ್ ಸಾಬ್, ವಕ್ಫ್ ಮಂಡಳಿ ಅಧ್ಯಕ್ಷ ಹುಮಾಯೂನ್ ಖಾನ್, ಪಾಲಿಕೆಯ ಸ್ಥಾಯಿ ಸಮಿತಿಯ ಅಧ್ಯಕ್ಷರು ಹಾಗೂ ಸದಸ್ಯರು, ಜನಪ್ರತಿನಿಧಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.