ಕೋವಿಡ್; ಭಯ ಬೇಡ, ಮುಂಜಾಗ್ರತೆ ಕ್ರಮವಹಿಸಿ: ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ

0
54

BP NEWS: ಬಳ್ಳಾರಿ: ಡಿಸೆಂಬರ್.31:
ಜಿಲ್ಲೆಯಲ್ಲಿ ಯಾವುದೇ ಹೊಸ ರೂಪಾಂತರಿ ಕೋವಿಡ್ ಪ್ರಕರಣಗಳು ಕಂಡುಬಂದಿಲ್ಲ, ಕೋವಿಡ್ ನಿಯಂತ್ರಿಸುವಲ್ಲಿ ಜಿಲ್ಲಾಡಳಿತ ಸನ್ನದ್ದವಾಗಿದ್ದು, ಸಾರ್ವಜನಿಕರು ಯಾವುದೇ ರೀತಿಯ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲವೆಂದು ಪರಿಶಿಷ್ಟ ಪಂಗಡಗಳ ಕಲ್ಯಾಣ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ನಾಗೇಂದ್ರ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಶನಿವಾರದಂದು, ನಗರದ ವಿಮ್ಸ್ ಆಸ್ಪತ್ರೆಯ ಆಡಳಿತ ಭವನದ ಸಭಾಂಗಣದಲ್ಲಿ ಕೋವಿಡ್ (ಜೆಎನ್-1) ತಡೆಗಟ್ಟುವಿಕೆ ಕುರಿತು ಹಮ್ಮಿಕೊಂಡಿದ್ದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದು ಮಾತನಾಡಿದ ಅವರು, ಕೋವಿಡ್ ಎದುರಿಸಲು ಜಿಲ್ಲೆಯಲ್ಲಿ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.
ಜಿಲ್ಲಾ ಆರೋಗ್ಯಾಧಿಕಾರಿ ಡಾ.ವೈ.ರಮೇಶ್ ಬಾಬು ಅವರು ಮಾತನಾಡಿ, ಈಗಾಗಲೇ ಜಿಲ್ಲೆಯಲ್ಲಿನ ಎಲ್ಲಾ ಆಸ್ಪತ್ರೆಗಳು ಸೇರಿದಂತೆ 275 ವೆಂಟಿಲೇಟರ್‍ಗಳು, 889 ಆಮ್ಲಜನಕ ಸಹಿತ ಹಾಸಿಗೆಗಳು, 356 ಐಸಿಯು ಬೆಡ್‍ಗಳು ಲಭ್ಯವಿದ್ದು, ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ಆಮ್ಲಜನಕ ಉತ್ಪಾದನಾ ಘಟಕಗಳು ಕಾರ್ಯ ನಿರ್ವಹಿಸುತ್ತಿವೆ ಎಂದು ಹೇಳಿದರು.
ಪ್ರಸ್ತುತ ಕೋವಿಡ್ ರೂಪಾಂತರಿ ವೈರಸ್ ಜೆಎನ್-1 ಪ್ರಕರಣಗಳು ಹೆಚ್ಚಾಗುತ್ತಿದ್ದ ಕಾರಣ, ರಾಜ್ಯ ಸರ್ಕಾರದ ಮಾರ್ಗಸೂಚಿಯಂತೆ ಜಿಲ್ಲೆಯಲ್ಲಿಯೂ ಸಹ ಅಗತ್ಯ ಮುಂಜಾಗೃತೆ ಕೈಗೊಳ್ಳಲಾಗುತ್ತಿದೆ. ಆದರೆ ಇಲ್ಲಿಯವರೆಗೆ ಜಿಲ್ಲೆಯಲ್ಲಿ ಯಾವುದೇ ಕೋವಿಡ್ ರೂಪಾಂತರಿ ಜೆಎನ್-1 ಪ್ರಕರಣಗಳು ವರದಿಯಾಗಿರುವುದಿಲ್ಲ ಎಂದು ಸಭೆಗೆ ತಿಳಿಸಿದರು.
ಶೀತ, ಜ್ವರ, ತಲೆನೋವು, ಮೂಗು ಕಟ್ಟುವುದು, ಕಫ, ಕೆಮ್ಮು, ವಾಸನೆಗೊತ್ತಾಗದೇ ಇರುವುದು ಇವು ಸಾಮಾನ್ಯ ಲಕ್ಷಣಗಳಾಗಿವೆ. ಜಿಲ್ಲೆಯಲ್ಲಿ ಡಿ.24ರಿಂದ ಮುಂಜಾಗೃತ ಕ್ರಮವಾಗಿ ಆರ್ಟಿಫಿಸಿಆರ್ ಮತ್ತು ಲ್ಯಾಟ್ ವಿಧಾನಗಳ ಕೋವಿಡ್ ಟೆಸ್ಟ್ಗಳನ್ನು ಮಾಡಲಾಗುತ್ತಿದ್ದು, ಇಲ್ಲಿಯವರೆಗೆ 906 ಟೆಸ್ಟ್ಗಳನ್ನು ಮಾಡಲಾಗಿದೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು ಕೋವಿಡ್ 17 ಪ್ರಕರಣಗಳು ದಾಖಲಾಗಿದ್ದು, ಅದರಲ್ಲಿ ಗುಣಮುಖರಾದವರು 04 ಜನ ಮತ್ತು ಪ್ರಸ್ತುತ ಚಿಕಿತ್ಸೆ ಪಡೆಯುತ್ತಿರುವವರು 13 ಜನ ಎಂದು ಹೇಳಿದರು.
ಜಿಲ್ಲೆಯಲ್ಲಿ ಎಲ್ಲಾ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳನ್ನು ದಾಸ್ತಾನು ಮಾಡಿಕೊಳ್ಳಲಾಗಿದೆ. ವೈದ್ಯರು ಮತ್ತು ಎಲ್ಲಾ ಸಿಬ್ಬಂದಿಯವರಿಗೆ ಕೋವಿಡ್ ಮುಂಜಾಗ್ರತೆಯ ತರಬೇತಿ ನೀಡಲಾಗಿದ್ದು, ಸಾರ್ವಜನಿಕರಿಗೆ ವ್ಯಾಪಕ ಮಾಹಿತಿ ನೀಡಲು ಕ್ರಮ ವಹಿಸಲಾಗಿದೆ ಎಂದು ಸಭೆಗೆ ತಿಳಿಸಿದರು.
ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಮಾತನಾಡಿ, ಸರ್ಕಾರದ ಮಾರ್ಗಸೂಚಿಯಂತೆ 60ವರ್ಷ ಮೇಲ್ಪಟ್ಟವರು, ಗರ್ಭಿಣಿಯರು, ಮಧುಮೇಹಿಗಳು, ಕ್ಯಾನ್ಸರ್ ಚಿಕಿತ್ಸೆ ಪಡೆಯುತ್ತಿರುವವರು, ಮುಂತಾದವರು ಸೋಂಕಿಗೆ ಒಳಗಾಗದಂತೆ ಸಾರ್ವಜನಿಕ ಸ್ಥಳಗಳಿಗೆ ಅಥವಾ ಆಸ್ಪತ್ರೆಗಳಿಗೆ ಬರುವ ಸಂದರ್ಭದಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಅದರಲ್ಲೂ ಮಕ್ಕಳಿಗೆ ವಿಶೇಷ ಕಾಳಜಿಯನ್ನು ವಹಿಸಬೇಕು. ಸೋಂಕು ಖಚಿತಪಟ್ಟಲ್ಲಿ 7 ದಿನಗಳ ಕಾಲ ಪ್ರತ್ಯೇಕವಾಗಿ ಮನೆಯಲ್ಲಿಯೇ ಆರೈಕೆ ಪಡೆಯಬಹುದು. ಯಾವುದೇ ರೀತಿಯ ಭಯ ಪಡುವ ಅಗತ್ಯವಿಲ್ಲ ಎಂದು ಹೇಳಿದರು.
ಸಭೆಯಲ್ಲಿ ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಬಸರೆಡ್ಡಿ, ವಿಮ್ಸ್ ನಿರ್ದೇಶಕ ಡಾ.ಗಂಗಾಧರ ಗೌಡ, ವಿಮ್ಸ್ ಆಡಳಿತಾಧಿಕಾರಿ ಸಿದ್ರಾಮೇಶ್ವರ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here