
ಬೆಂಗಳೂರು, ಜ.21: ಮುಂಬರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಪಾಲಿಕೆಗಳ ಚುನಾವಣೆಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) ಸಿದ್ಧತೆ ಆರಂಭಿಸಿದ್ದು, ಜಿಬಿಎ ಚುನಾವಣಾ ಉಸ್ತುವಾರಿಯಾಗಿ ರಾಮ್ ಮಾಧವ್ ಅವರನ್ನು ನೇಮಕ ಮಾಡಿದೆ.
ಜೂನ್ 30ರೊಳಗಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆಯನ್ನು ನಡೆಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿರುವ ಹಿನ್ನೆಲೆಯಲ್ಲಿ, ಪಕ್ಷವು ಚುನಾವಣಾ ತಯಾರಿಯನ್ನು ವೇಗಗೊಳಿಸಿದೆ. ಈ ಹಿನ್ನೆಲೆಯಲ್ಲಿ ಉಸ್ತುವಾರಿ ಹಾಗೂ ಸಹ ಉಸ್ತುವಾರಿಗಳನ್ನು ನೇಮಕ ಮಾಡುವ ಮೂಲಕ ಬಿಜೆಪಿ ಅಧಿಕೃತವಾಗಿ ಚುನಾವಣಾ ಕಾರ್ಯಚಟುವಟಿಕೆಗಳಿಗೆ ಚಾಲನೆ ನೀಡಿದೆ.
ಜಿಬಿಎ ಚುನಾವಣೆಯ ಉಸ್ತುವಾರಿಯಾಗಿ ರಾಮ್ ಮಾಧವ್ ಅವರನ್ನು ನೇಮಕ ಮಾಡಲಾಗಿದ್ದು, ಸಹ ಉಸ್ತುವಾರಿಗಳಾಗಿ ಸತೀಶ್ ಪೂನಿಯಾ ಮತ್ತು ಸಂಜಯ್ ಉಪಧ್ಯಾಯ್ ಅವರನ್ನು ನೇಮಕ ಮಾಡಲಾಗಿದೆ. ಈ ಕುರಿತು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಅರುಣ್ ಸಿಂಗ್ ಅಧಿಕೃತ ಆದೇಶ ಹೊರಡಿಸಿದ್ದಾರೆ.
ಹಲವು ವರ್ಷಗಳ ಬಳಿಕ ಗ್ರೇಟರ್ ಬೆಂಗಳೂರು ಪಾಲಿಕೆ ಚುನಾವಣೆ ನಡೆಯುತ್ತಿರುವುದರಿಂದ, ಈ ಚುನಾವಣೆಯನ್ನು ಬಿಜೆಪಿ ಪ್ರತಿಷ್ಠೆಯ ಕಣವಾಗಿ ಪರಿಗಣಿಸಿದೆ. ಇತ್ತೀಚೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಬುಧವಾರ (ಜನವರಿ 20) ದೆಹಲಿಯ ಪಕ್ಷದ ಕಚೇರಿಯಲ್ಲಿ ಅಧಿಕಾರ ಸ್ವೀಕಾರ ಮಾಡಿರುವುದು ಪಕ್ಷದ ಚಟುವಟಿಕೆಗಳಿಗೆ ಇನ್ನಷ್ಟು ವೇಗ ನೀಡಿದೆ.
ದರ ಬೆನ್ನಲ್ಲೇ ಗ್ರೇಟರ್ ಬೆಂಗಳೂರು ಚುನಾವಣೆಗೆ ಉಸ್ತುವಾರಿ ಹಾಗೂ ಸಹ ಉಸ್ತುವಾರಿಗಳನ್ನು ನೇಮಕ ಮಾಡುವ ಮೂಲಕ, ರಾಜ್ಯದಲ್ಲಿ ಪಕ್ಷದ ಸಂಘಟನೆ ಮತ್ತು ಚುನಾವಣಾ ತಂತ್ರಗಾರಿಕೆಗೆ ಬಿಜೆಪಿ ಒತ್ತು ನೀಡಿದೆ.
ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಮೈತ್ರಿಕೂಟ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜಯ ಸಾಧಿಸಿರುವ ಹಿನ್ನೆಲೆ, ಕರ್ನಾಟಕದಲ್ಲೂ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದ ಚರ್ಚೆಗಳು ರಾಜಕೀಯ ವಲಯದಲ್ಲಿ ತೀವ್ರಗೊಂಡಿವೆ.
ಈ ಹಿಂದೆ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಅವರು ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸ್ವತಂತ್ರವಾಗಿ ಸ್ಪರ್ಧಿಸುವುದಾಗಿ ಹೇಳಿಕೆ ನೀಡಿದ್ದರಿಂದ ರಾಜಕೀಯ ಗೊಂದಲಗಳು ಉಂಟಾಗಿದ್ದವು. ಬಳಿಕ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಸಭೆ ನಡೆಸಿ, ಜಿಬಿಎ ಚುನಾವಣೆಯನ್ನು ಮೈತ್ರಿಯಾಗಿ ಎದುರಿಸುವುದಾಗಿ ಘೋಷಣೆ ಮಾಡಿರುವುದು ರಾಜಕೀಯ ಸಮೀಕರಣಗಳಿಗೆ ಹೊಸ ತಿರುವು ನೀಡಿದೆ.





