10,800 ಶಿಕ್ಷಕರ ನೇಮಕಾತಿಗೆ ಸರ್ಕಾರ ಚಿಂತನೆ- ಶಿಕ್ಷಣ ಸಚಿವ ಮಧು ಬಂಗಾರಪ್ಪ

0
10
Advertisement

ಶಿವಮೊಗ್ಗ, ಜ.27: ಮುಂದಿನ ಶೈಕ್ಷಣಿಕ ವರ್ಷ ಆರಂಭಕ್ಕೂ ಮುನ್ನ ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ 10,800 ಶಿಕ್ಷಕರ ನೇಮಕಾತಿ ಮಾಡುವ ಚಿಂತನೆ ರಾಜ್ಯ ಸರ್ಕಾರದ ಮುಂದಿದೆ ಎಂದು ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ನಗರದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ರಾಜ್ಯದ ಶಾಲೆಗಳಲ್ಲಿದ್ದ ಶಿಕ್ಷಕರ ಕೊರತೆಯನ್ನು ನೀಗಿಸುವ ಉದ್ದೇಶದಿಂದ ಸರ್ಕಾರವು ಈಗಾಗಲೇ 14,499 ಪೂರ್ಣಾವಧಿ ಶಿಕ್ಷಕರನ್ನು ನೇಮಕ ಮಾಡಿದ್ದು, ಇದೇ ಮೊದಲ ಬಾರಿಗೆ 51,000 ಅತಿಥಿ ಶಿಕ್ಷಕರನ್ನೂ ಸೇವೆಗೆ ಕರೆತರಲಾಗಿದೆ ಎಂದು ಹೇಳಿದರು.

ಶಿವಮೊಗ್ಗ ಜಿಲ್ಲೆಯ ಉಸ್ತುವಾರಿ ಸಚಿವರೂ ಆಗಿರುವ ಮಧು ಬಂಗಾರಪ್ಪ, ಸರ್ಕಾರಿ ಶಾಲೆಗಳಲ್ಲಿ ಕಂಪ್ಯೂಟರ್ ಆಧಾರಿತ ಶಿಕ್ಷಣವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ 5,000 ಶಾಲೆಗಳಲ್ಲಿ ಕಂಪ್ಯೂಟರ್ ಪ್ರಯೋಗಾಲಯಗಳು ಹಾಗೂ ಸ್ಮಾರ್ಟ್ ಕ್ಲಾಸ್‌ಗಳನ್ನು ಸ್ಥಾಪಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು. ಈ ಮಹತ್ವದ ಯೋಜನೆಗಳಿಗೆ ಸರ್ಕಾರವು ಒಟ್ಟು 160 ಕೋಟಿ ರೂ. ಅನುದಾನವನ್ನು ಮೀಸಲಿಟ್ಟಿದೆ ಎಂದು ಅವರು ಹೇಳಿದರು.

ಇದೇ ಸಂದರ್ಭದಲ್ಲಿ, ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಗೂಡವಿ ಪಕ್ಷಿಧಾಮವನ್ನು ‘ಒನ್ ಡಿಸ್ಟ್ರಿಕ್ಟ್, ಒನ್ ಡೆಸ್ಟಿನೇಷನ್’ ಯೋಜನೆಯಡಿ ಪ್ರಮುಖ ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಸಚಿವರು ಘೋಷಿಸಿದರು. ಅಲ್ಲದೆ, ಶ್ರೀ ಚಂದ್ರಗುಟ್ಟಿ ರೇಣುಕಾಂಬಾದೇವಿ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಸರ್ಕಾರ ಈಗಾಗಲೇ ಅನುಮೋದನೆ ನೀಡಿದ್ದು, ಯಾತ್ರಾಕೇಂದ್ರದ ಸಮಗ್ರ ಅಭಿವೃದ್ಧಿಗೆ ವಿಶೇಷ ಕಾರ್ಯಯೋಜನೆ ರೂಪಿಸಲಾಗುತ್ತಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಶಿಕ್ಷಣ ಹಾಗೂ ಪ್ರವಾಸೋದ್ಯಮ ಕ್ಷೇತ್ರಗಳನ್ನು ಸಮಾನವಾಗಿ ಬಲಪಡಿಸುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ ಎಂದು ಅವರು ಹೇಳಿದರು.

Advertisement

LEAVE A REPLY

Please enter your comment!
Please enter your name here