
ಬೆಂಗಳೂರು, ಮಾ.17: ಪ್ರಸಕ್ತ ಶೈಕ್ಷಣಿಕ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗಳು ಮಂಗಳವಾರದಿಂದ ಆರಂಭವಾಗಲಿದ್ದು, ಏಪ್ರಿಲ್ 2ರವರೆಗೆ ನಡೆಯಲಿವೆ. ಪರೀಕ್ಷೆಯನ್ನು ಸುಸೂತ್ರ ಹಾಗೂ ಪಾರದರ್ಶಕವಾಗಿ ನಡೆಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಎಲ್ಲಾ ರೀತಿಯ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ.
ಈ ಬಾರಿ ರಾಜ್ಯದಾದ್ಯಂತ ಒಟ್ಟು 8,65,988 ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಮೊದಲ ದಿನದ ಪರೀಕ್ಷೆ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1.15ರವರೆಗೆ ನಡೆಯಲಿದೆ. ಪರೀಕ್ಷೆಯ ಸುಗಮ ನಿರ್ವಹಣೆಗೆ ಜಿಲ್ಲಾಧಿಕಾರಿಗಳು, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು (ಸಿಇಒ), ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅಂತಿಮ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ.
ಪರೀಕ್ಷಾ ಕೇಂದ್ರಗಳಲ್ಲಿ ಪಾರದರ್ಶಕತೆಯನ್ನು ಖಚಿತಪಡಿಸಲು ವೆಬ್‌ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದೆ. ಜೊತೆಗೆ ಪ್ರಶ್ನೆಪತ್ರಿಕೆ ಸೋರಿಕೆ ಕುರಿತು ಸುಳ್ಳು ಮಾಹಿತಿ ಹರಡುವುದು ಅಥವಾ ನಕಲಿ ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚುವವರ ಮೇಲೆ ಕಟ್ಟುನಿಟ್ಟಿನ ನಿಗಾ ವಹಿಸಲಾಗಿದೆ ಎಂದು ಇಲಾಖೆ ತಿಳಿಸಿದೆ.
ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ
ಪರೀಕ್ಷಾ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ರಾಜ್ಯದಾದ್ಯಂತ ಉಚಿತ ಬಸ್ ಪ್ರಯಾಣ ವ್ಯವಸ್ಥೆ ಕಲ್ಪಿಸಲಾಗಿದೆ. ವಿದ್ಯಾರ್ಥಿಗಳು ತಮ್ಮ ಹಾಲ್ ಟಿಕೆಟ್ ಪ್ರದರ್ಶಿಸಿ ನಿಗದಿತ ಪರೀಕ್ಷಾ ಕೇಂದ್ರಗಳಿಗೆ ಬಸ್‌ಗಳಲ್ಲಿ ಪ್ರಯಾಣಿಸಬಹುದು. ಉತ್ತಮ ಫಲಿತಾಂಶ ಸಾಧನೆಗಾಗಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರಗಳನ್ನು ನಡೆಸಿ, ಪರೀಕ್ಷಾ ಭಯವನ್ನು ನಿವಾರಿಸುವ ನಿಟ್ಟಿನಲ್ಲಿ ಮಾನಸಿಕವಾಗಿ ಸಜ್ಜುಗೊಳಿಸಲಾಗಿದೆ.
ವಿದ್ಯಾರ್ಥಿಗಳಿಗೆ ಸದನದಿಂದ ಶುಭಾಶಯ
ವಿಧಾನಸಭೆಯಲ್ಲಿ ಮುಖ್ಯಮಂತ್ರಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು, ವಿರೋಧ ಪಕ್ಷದ ನಾಯಕರು ಹಾಗೂ ಸಭಾಪತಿಗಳು ಒಕ್ಕೊರಲಿನಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಶುಭಾಶಯ ಕೋರಿದರು.
ಮುಖ್ಯಮಂತ್ರಿ ಮಾತನಾಡಿ, “ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುತ್ತಿರುವ ಎಲ್ಲ ವಿದ್ಯಾರ್ಥಿಗಳಿಗೆ ಸರ್ಕಾರದ ಪರವಾಗಿ ಹಾಗೂ ವೈಯಕ್ತಿಕವಾಗಿ ಶುಭಾಶಯಗಳು. ವಿದ್ಯಾರ್ಥಿಗಳು ಯಾವುದೇ ಆತಂಕ ಅಥವಾ ಭಯವಿಲ್ಲದೆ ಪರೀಕ್ಷೆಯನ್ನು ಎದುರಿಸಬೇಕು. ಸರ್ಕಾರದಿಂದ ಮೂರು ಬಾರಿ ಪರೀಕ್ಷೆ ಬರೆಯುವ ಅವಕಾಶ (ಪರೀಕ್ಷೆ–1, 2 ಮತ್ತು 3) ಕಲ್ಪಿಸಲಾಗಿದೆ. ಒಂದು ವೇಳೆ ಕಡಿಮೆ ಅಂಕ ಬಂದರೂ ಅಥವಾ ಅನುತ್ತೀರ್ಣರಾದರೂ ಮತ್ತೆ ಪರೀಕ್ಷೆ ಬರೆಯುವ ಅವಕಾಶ ಇರುವುದರಿಂದ ಧೃತಿಗೆಡಬಾರದು,” ಎಂದು ಹೇಳಿದರು.
ಮರುಪರೀಕ್ಷೆ ಶುಲ್ಕ ರದ್ದು
ಉಭಯ ಸದನಗಳಲ್ಲಿ ಮಾತನಾಡಿದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ, ದ್ವಿತೀಯ ಪಿಯುಸಿ ಪರೀಕ್ಷೆಗಳು ಯಾವುದೇ ಅಡೆತಡೆಯಿಲ್ಲದೆ ಯಶಸ್ವಿಯಾಗಿ ಪೂರ್ಣಗೊಂಡಿರುವುದನ್ನು ಉಲ್ಲೇಖಿಸಿದರು. ವಿದ್ಯಾರ್ಥಿಗಳಲ್ಲಿ ಪರೀಕ್ಷಾ ಭಯ ನಿವಾರಣೆಗಾಗಿ ವರ್ಷದಲ್ಲಿ ಮೂರು ಪರೀಕ್ಷೆಗಳ ಅವಕಾಶ ನೀಡಲಾಗಿದೆ ಎಂದು ಅವರು ತಿಳಿಸಿದರು. ಅನುತ್ತೀರ್ಣರಾದ ವಿದ್ಯಾರ್ಥಿಗಳು ಮರುಪರೀಕ್ಷೆ ಬರೆಯಲು ವಿಧಿಸಲಾಗುತ್ತಿದ್ದ ಶುಲ್ಕವನ್ನು ಸರ್ಕಾರ ರದ್ದುಪಡಿಸಿದೆ ಎಂದರು.
ಖಾಸಗಿ ಶಾಲೆಗಳ ಮಾದರಿಯಲ್ಲಿ ಸರ್ಕಾರಿ ಶಾಲೆಗಳಲ್ಲೂ ಪೋಷಕರು–ಶಿಕ್ಷಕರ ಸಭೆಗಳನ್ನು ಯಶಸ್ವಿಯಾಗಿ ನಡೆಸಲಾಗಿದೆ ಎಂದು ಹೇಳಿದ ಅವರು, ಪರೀಕ್ಷಾ ಪ್ರಕ್ರಿಯೆಗೆ ಸಹಕರಿಸಿದ ಗೃಹ ಇಲಾಖೆ, ಶಿಕ್ಷಕರು ಹಾಗೂ ಪೋಷಕರಿಗೆ ಕೃತಜ್ಞತೆ ಸಲ್ಲಿಸಿದರು.
ಅಂಕಗಳಿಗಾಗಿ ಒತ್ತಡ ಬೇಡ: ಆರ್.ಅಶೋಕ್
ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಮಾತನಾಡಿ, ಎಸ್‌ಎಸ್‌ಎಲ್‌ಸಿ ಪರೀಕ್ಷೆ ವಿದ್ಯಾರ್ಥಿಗಳ ಜೀವನದ ಪ್ರಮುಖ ಹಂತವಾಗಿದ್ದು, ಪೋಷಕರು ಕೊನೆಯ ಕ್ಷಣದಲ್ಲಿ ಮಕ್ಕಳ ಮೇಲೆ ಅಂಕಗಳಿಗಾಗಿ ಅನಗತ್ಯ ಒತ್ತಡ ಹೇರುವುದನ್ನು ತಪ್ಪಿಸಬೇಕು ಎಂದು ಸಲಹೆ ನೀಡಿದರು. ಇದೇ ವೇಳೆ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಪ್ರಶ್ನೆಪತ್ರಿಕೆ ಹರಡುವ ಕಿಡಿಗೇಡಿಗಳ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.
ವಿಧಾನ ಪರಿಷತ್ ಉಪಸಭಾಪತಿ ಎಂ.ಕೆ. ಪ್ರಾಣೇಶ್ ಮಾತನಾಡಿ, “ಪರೀಕ್ಷೆ ಎಂದರೆ ಯುದ್ಧವಲ್ಲ. ವಿದ್ಯಾರ್ಥಿಗಳು ಓದಿದ್ದನ್ನು ಬರೆಯುವ ಅವಕಾಶ ಮಾತ್ರ. ಆತ್ಮವಿಶ್ವಾಸದಿಂದ ಪರೀಕ್ಷೆಯನ್ನು ಎದುರಿಸಿ,” ಎಂದು ಸದನದ ಪರವಾಗಿ ವಿದ್ಯಾರ್ಥಿಗಳಿಗೆ ಶುಭಕೋರಿದರು.





