ರಾಜ್ಯದಲ್ಲಿ ನೀರಿನ ಕೊರತೆಯ ಭೀತಿ; ತುರ್ತು ಕ್ರಮಕ್ಕೆ ಸರ್ಕಾರ ಸೂಚನೆ

0
12
Advertisement

ಬೆಂಗಳೂರು, ಏ.04: ರಾಜ್ಯದಲ್ಲಿ ಬೇಸಿಗೆ ತಾಪಮಾನ ಏರಿಕೆಯಾಗುತ್ತಿರುವ ನಡುವೆಯೇ ಮಳೆ ಕೊರತೆ ಭೀತಿ ಹೆಚ್ಚಿದ್ದು, 207 ತಾಲ್ಲೂಕುಗಳಲ್ಲಿ ನೀರಿನ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ ಎಂದು ಸರ್ಕಾರ ಎಚ್ಚರಿಕೆ ನೀಡಿದೆ.

ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಸಂಪುಟ ಉಪ ಸಮಿತಿ ಹಲವು ಮಹತ್ವದ ಸೂಚನೆಗಳನ್ನು ನೀಡಿದೆ. ಈಗಾಗಲೇ ರಾಜ್ಯದ 60 ತಾಲ್ಲೂಕುಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಾಣಿಸಿಕೊಂಡಿದ್ದು, ಪರಿಸ್ಥಿತಿ ಇನ್ನಷ್ಟು ಗಂಭೀರವಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭಾರತೀಯ ಹವಾಮಾನ ಇಲಾಖೆ ಹವಾಮಾನ ವೈಪರೀತ್ಯದ ಹಿನ್ನೆಲೆ ಈ ವರ್ಷ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಕೊರತೆ ಉಂಟಾಗಬಹುದು ಎಂದು ಮುನ್ಸೂಚನೆ ನೀಡಿದೆ. ಇದರಿಂದ ಗ್ರಾಮೀಣ ಭಾಗಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಳ್ಳುವ ಆತಂಕ ವ್ಯಕ್ತವಾಗಿದೆ.

ಈ ಹಿನ್ನೆಲೆಯಲ್ಲಿ ಸರ್ಕಾರ ಕೆಲ ಪ್ರಮುಖ ನಿರ್ದೇಶನಗಳನ್ನು ನೀಡಿದೆ. ಜಲಾಶಯಗಳಲ್ಲಿ ಕುಡಿಯುವ ನೀರಿಗೆ ಆದ್ಯತೆ ನೀಡಬೇಕು, ಜಾನುವಾರುಗಳಿಗೆ ಮೇವು ಲಭ್ಯತೆಯನ್ನು ನಿರಂತರವಾಗಿ ಪರಿಶೀಲಿಸಬೇಕು, ಹಾಗೂ ಮನರೇಗಾ ಯೋಜನೆಯಡಿ ಜಲ ಸಂರಕ್ಷಣಾ ಕಾಮಗಾರಿಗಳಿಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಪರಿಸ್ಥಿತಿಯನ್ನು ಸಮಗ್ರವಾಗಿ ಪರಿಶೀಲಿಸಲಾಗಿದೆ. ನೀರಿನ ಕೊರತೆ ಇರುವ ಪ್ರದೇಶಗಳಲ್ಲಿ ತಕ್ಷಣ ಪರ್ಯಾಯ ವ್ಯವಸ್ಥೆ ಕಲ್ಪಿಸಿ, ಟ್ಯಾಂಕರ್‌ಗಳ ಮೂಲಕ ಕುಡಿಯುವ ನೀರು ಪೂರೈಸುವಂತೆ ಕೃಷ್ಣಬೈರೇಗೌಡ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಇದಲ್ಲದೆ, ಹೊಸ ಬೋರ್‌ವೆಲ್‌ ತೋಡುವುದು, ಹಳೆಯ ಬೋರ್‌ವೆಲ್‌ಗಳನ್ನು ಪುನರುಜ್ಜೀವನಗೊಳಿಸುವುದು ಹಾಗೂ ನೀರಿನ ಗುಣಮಟ್ಟವನ್ನು ಪರಿಶೀಲಿಸುವ ಕಾರ್ಯಗಳನ್ನು ವೇಗಗೊಳಿಸಲು ಸೂಚಿಸಲಾಗಿದೆ.

ಇನ್ನೊಂದೆಡೆ, ಪೂರ್ವ ಮುಂಗಾರಿನ ಅವಧಿಯಲ್ಲಿ ರಾಜ್ಯದ 17 ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಿದ್ದು, 5 ಜಿಲ್ಲೆಗಳಲ್ಲಿ ಅಧಿಕ, 6 ಜಿಲ್ಲೆಗಳಲ್ಲಿ ವಾಡಿಕೆ ಮತ್ತು 3 ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯಾಗಿದೆ ಎಂದು ವರದಿಯಾಗಿದೆ. ಇದೀಗ ಮತ್ತೆ ಕೆಲವು ಭಾಗಗಳಲ್ಲಿ ಮಳೆಯಾಗುತ್ತಿರುವ ಹಿನ್ನೆಲೆ ಪರಿಸ್ಥಿತಿ ಸುಧಾರಿಸಬಹುದೆಂಬ ನಿರೀಕ್ಷೆಯೂ ವ್ಯಕ್ತವಾಗಿದೆ.

ಆದರೆ, 2026ನೇ ಸಾಲಿನಲ್ಲಿ 200ಕ್ಕೂ ಹೆಚ್ಚು ತಾಲ್ಲೂಕುಗಳಲ್ಲಿ ಮಳೆ ಕೊರತೆ ಮುಂದುವರಿಯುವ ಸಾಧ್ಯತೆ ಇರುವುದರಿಂದ, ಸರ್ಕಾರ ಮುನ್ನೆಚ್ಚರಿಕಾ ಕ್ರಮಗಳನ್ನು ಕಡ್ಡಾಯವಾಗಿ ಜಾರಿಗೆ ತರಲು ಮುಂದಾಗಿದೆ. ಈಗಾಗಲೇ ನೀರಿನ ಅಭಾವ ಎದುರಿಸುತ್ತಿರುವ 60 ತಾಲ್ಲೂಕುಗಳಲ್ಲಿ ಟ್ಯಾಂಕರ್‌ಗಳ ಮೂಲಕ ನೀರು ಪೂರೈಸುವ ಕಾರ್ಯ ಆರಂಭಿಸಲು ಯೋಜನೆ ರೂಪಿಸಲಾಗಿದೆ.

Advertisement

LEAVE A REPLY

Please enter your comment!
Please enter your name here