ಬೆಂಗಳೂರು, ಮೇ 29: ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ ಬೆನ್ನಲ್ಲೇ ಕರ್ನಾಟಕದ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ಸಿದ್ದರಾಮಯ್ಯ ಅವರ ರಾಜೀನಾಮೆಯನ್ನು ರಾಜ್ಯಪಾಲರು ಅಂಗೀಕರಿಸಿದ್ದು, ಸಚಿವ ಸಂಪುಟವನ್ನೂ ವಿಸರ್ಜಿಸಿದ್ದಾರೆ. ಇದರೊಂದಿಗೆ ನೂತನ ಸರ್ಕಾರ ರಚನೆಗೆ ಕಾಂಗ್ರೆಸ್ ಪಕ್ಷದಲ್ಲಿ ಚಟುವಟಿಕೆಗಳು ಬಿರುಸುಗೊಂಡಿವೆ.
ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ಸಭೆಯನ್ನು ಮೇ 30ರಂದು ಶನಿವಾರ ಸಂಜೆ 4 ಗಂಟೆಗೆ ವಿಧಾನಸೌಧದಲ್ಲಿ ಕರೆಯಲಾಗಿದೆ. ಸಭೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಹೊಸ ನಾಯಕನ ಆಯ್ಕೆ ನಡೆಯಲಿದ್ದು, ಬಳಿಕ ಸರ್ಕಾರ ರಚನೆಗೆ ಹಕ್ಕು ಮಂಡಿಸುವ ಪ್ರಕ್ರಿಯೆ ಆರಂಭವಾಗಲಿದೆ.
ಕಾಂಗ್ರೆಸ್ ಶಾಸಕಾಂಗ ಪಕ್ಷದ ಕಾರ್ಯದರ್ಶಿ ಅಲ್ಲಮಪ್ರಭು ಪಾಟೀಲ್ ಈ ಕುರಿತು ಮಾಹಿತಿ ನೀಡಿದ್ದು, ವಿಧಾನಸೌಧದ ಮೂರನೇ ಮಹಡಿಯ ಕೊಠಡಿ ಸಂಖ್ಯೆ 334ರ ಸಮ್ಮೇಳನ ಸಭಾಂಗಣದಲ್ಲಿ ಸಭೆ ನಡೆಯಲಿದೆ ಎಂದು ತಿಳಿಸಿದ್ದಾರೆ. ಸಭೆಯ ಅಧ್ಯಕ್ಷತೆಯನ್ನು ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯ ವಹಿಸಲಿದ್ದಾರೆ.
ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ವಿಧಾನ ಪರಿಷತ್ ಸಭಾ ನಾಯಕ ಎನ್.ಎಸ್. ಭೋಸರಾಜು ಸೇರಿದಂತೆ ಪಕ್ಷದ ಹಿರಿಯ ನಾಯಕರು ಭಾಗವಹಿಸಲಿದ್ದಾರೆ. ಎಲ್ಲಾ ಕಾಂಗ್ರೆಸ್ ಶಾಸಕರು ಕಡ್ಡಾಯವಾಗಿ ಸಭೆಯಲ್ಲಿ ಹಾಜರಾಗುವಂತೆ ಸೂಚಿಸಲಾಗಿದೆ.
ಡಿಕೆಶಿಗೆ ನಾಯಕತ್ವದ ಪಟ್ಟ?!
ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ. ಶಿವಕುಮಾರ್ ಆಯ್ಕೆಯಾಗುವ ಸಾಧ್ಯತೆಗಳು ಹೆಚ್ಚಿವೆ. ಶನಿವಾರ ನಡೆಯಲಿರುವ ಸಿಎಲ್‌ಪಿ ಸಭೆಯಲ್ಲಿ ಅವರ ಹೆಸರನ್ನು ಅಧಿಕೃತವಾಗಿ ಘೋಷಿಸುವ ನಿರೀಕ್ಷೆ ಇದೆ. ಹೀಗಾಗಿ ರಾಜ್ಯ ರಾಜಕೀಯ ವಲಯದ ಚಿತ್ತ ಇದೀಗ ಸಭೆಯತ್ತ ನೆಟ್ಟಿದೆ.
ಈ ಮಧ್ಯೆ ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ದೆಹಲಿಗೆ ತೆರಳಿ ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿದ್ದಾರೆ. ಮುಖ್ಯಮಂತ್ರಿಯಾಗಿ ಎರಡು ಅವಧಿಗಳ ಕಾಲ ಸೇವೆ ಸಲ್ಲಿಸಲು ಅವಕಾಶ ನೀಡಿದಕ್ಕಾಗಿ ಪಕ್ಷದ ರಾಷ್ಟ್ರೀಯ ನಾಯಕರಿಗೆ ಸಿದ್ದರಾಮಯ್ಯ ಕೃತಜ್ಞತೆ ಸಲ್ಲಿಸಿದ್ದಾರೆ ಎನ್ನಲಾಗಿದೆ.
ಸೋಮವಾರ ಪ್ರಮಾಣವಚನ ಸಾಧ್ಯತೆ
ಎಲ್ಲವೂ ಅಂದುಕೊಂಡಂತೆ ನಡೆದರೆ ಡಿ.ಕೆ. ಶಿವಕುಮಾರ್ ಅವರು ಸೋಮವಾರ ಸಂಜೆ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ. ವಿಧಾನಸೌಧದ ಮೆಟ್ಟಿಲುಗಳು ಅಥವಾ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸಮಾರಂಭ ಆಯೋಜಿಸುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ ಎಂದು ಮೂಲಗಳು ತಿಳಿಸಿವೆ.
ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಯಾವ ನಿರ್ಧಾರ ಹೊರಬೀಳಲಿದೆ ಹಾಗೂ ಮುಖ್ಯಮಂತ್ರಿ ಹುದ್ದೆಗೆ ಡಿ.ಕೆ. ಶಿವಕುಮಾರ್ ಅವರ ಹೆಸರಿಗೆ ಅಧಿಕೃತ ಮುದ್ರೆ ಬೀಳಲಿದೆಯೇ ಎಂಬುದರ ಬಗ್ಗೆ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮನೆ ಮಾಡಿದೆ.




