ಬೆಂಗಳೂರು, ಮೇ 30: ರಾಜ್ಯ ರಾಜಕೀಯದ ಹಲವು ದಿನಗಳ ಕುತೂಹಲಕ್ಕೆ ಅಂತಿಮ ತೆರೆ ಬಿದ್ದಿದ್ದು, ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ನೂತನ ನಾಯಕರಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಇದರೊಂದಿಗೆ ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಅವರು ಅಧಿಕಾರ ಸ್ವೀಕರಿಸುವುದು ಖಚಿತವಾಗಿದೆ.
ವಿಧಾನಸೌಧದಲ್ಲಿ ಸೋಮವಾರ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದರು. ಬಳಿಕ ಮುಂದಿನ ನಾಯಕನಾಗಿ ಡಿ.ಕೆ. ಶಿವಕುಮಾರ್ ಅವರ ಹೆಸರನ್ನು ಸಿದ್ದರಾಮಯ್ಯ ಪ್ರಸ್ತಾಪಿಸಿದರು. ಹಿರಿಯ ನಾಯಕ ಡಾ. ಜಿ. ಪರಮೇಶ್ವರ್ ಅವರು ಈ ಪ್ರಸ್ತಾವವನ್ನು ಅನುಮೋದಿಸಿದರು.
ಸಭೆಯಲ್ಲಿ ಹಾಜರಿದ್ದ ಎಲ್ಲ ಶಾಸಕರು ಕೈ ಎತ್ತುವ ಮೂಲಕ ಡಿ.ಕೆ. ಶಿವಕುಮಾರ್ ಅವರ ಆಯ್ಕೆಗೆ ಒಮ್ಮತದ ಬೆಂಬಲ ಸೂಚಿಸಿದರು. ಕೇವಲ ಐದು ನಿಮಿಷಗಳಲ್ಲೇ ನಾಯಕನ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡಿತು.
ಸಭೆಯ ನಡುವೆ ಹತ್ತು ನಿಮಿಷಗಳ ವಿರಾಮದ ವೇಳೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಮುಖ್ಯಮಂತ್ರಿ ಕಚೇರಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಸಿದ್ದರಾಮಯ್ಯ, ಕೆ.ಸಿ. ವೇಣುಗೋಪಾಲ್ ಹಾಗೂ ರಣದೀಪ್ ಸಿಂಗ್ ಸುರ್ಜೇವಾಲಾ ಅವರೊಂದಿಗೆ ಮಹತ್ವದ ಚರ್ಚೆ ನಡೆಸಿದರು. ಬಳಿಕ ವೇಣುಗೋಪಾಲ್ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ದೂರವಾಣಿ ಮೂಲಕ ಸಿದ್ದರಾಮಯ್ಯ ಅವರ ರಾಜೀನಾಮೆ ಹಾಗೂ ಹೊಸ ನಾಯಕನ ಆಯ್ಕೆ ಕುರಿತ ಮಾಹಿತಿ ನೀಡಿದರು ಎಂದು ತಿಳಿದುಬಂದಿದೆ. ಪಕ್ಷದ ಹೈಕಮಾಂಡ್ ಸೂಚನೆಯಂತೆ ಸಂಪೂರ್ಣ ಪ್ರಕ್ರಿಯೆ ಸುಸೂತ್ರವಾಗಿ ನಡೆಯಿತು.
ಸಿಎಲ್‌ಪಿ ನಾಯಕರಾಗಿ ಆಯ್ಕೆಯಾದ ಬಳಿಕ ಡಿ.ಕೆ. ಶಿವಕುಮಾರ್ ಅವರು ಪಕ್ಷದ ಪ್ರಮುಖ ನಾಯಕರೊಂದಿಗೆ ರಾಜಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿ ಮಾಡಲಿದ್ದಾರೆ. ಈ ವೇಳೆ ಸರ್ಕಾರ ರಚನೆಗೆ ಹಕ್ಕು ಮಂಡಿಸುವ ಸಾಧ್ಯತೆ ಇದೆ.
ಎಲ್ಲವೂ ನಿರೀಕ್ಷೆಯಂತೆ ನಡೆದರೆ, ಬರುವ ಬುಧವಾರ ಡಿ.ಕೆ. ಶಿವಕುಮಾರ್ ಅವರು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಹೊಸ ಸರ್ಕಾರದ ಆಡಳಿತ ಅಧಿಕೃತವಾಗಿ ಆರಂಭವಾಗಲಿದೆ.




