ಸರ್ಕಾರಿ ಶಾಲೆಗಳಲ್ಲಿ ಚಲನಚಿತ್ರ ಚಿತ್ರೀಕರಣಕ್ಕೆ ನಿರ್ಬಂಧ; ಶಿಕ್ಷಣ ಇಲಾಖೆಯಿಂದ ಆದೇಶ!

0
4

ಬೆಂಗಳೂರು, ಜೂ.02: ರಾಜ್ಯದ ಸರ್ಕಾರಿ ಶಾಲೆಗಳ ಒಳಗೆ ಹಾಗೂ ಶಾಲಾ ಆವರಣದಲ್ಲಿ ಚಲನಚಿತ್ರ, ಕಿರುಚಿತ್ರ, ಸಾಕ್ಷ್ಯಚಿತ್ರ ಮತ್ತು ದೂರದರ್ಶನ ಧಾರಾವಾಹಿಗಳ ಚಿತ್ರೀಕರಣಕ್ಕೆ ಅನುಮತಿ ನೀಡುವುದಿಲ್ಲ ಎಂದು ಶಾಲಾ ಶಿಕ್ಷಣ ಇಲಾಖೆ ಸ್ಪಷ್ಟಪಡಿಸಿದೆ.

ಈ ಕುರಿತು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, ಇತ್ತೀಚಿನ ದಿನಗಳಲ್ಲಿ ವಿವಿಧ ನಿರ್ಮಾಪಕರು ಹಾಗೂ ನಿರ್ದೇಶಕರು ಸರ್ಕಾರಿ ಶಾಲೆಗಳಲ್ಲಿ ಚಿತ್ರೀಕರಣ ನಡೆಸಲು ಅನುಮತಿ ಕೋರಿ ಪ್ರಸ್ತಾವನೆಗಳನ್ನು ಸಲ್ಲಿಸುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದೆ.

ವಿದ್ಯಾರ್ಥಿಗಳ ಸುರಕ್ಷತೆ, ಗೌಪ್ಯತೆ ಮತ್ತು ಕಲಿಕಾ ವಾತಾವರಣಕ್ಕೆ ಯಾವುದೇ ರೀತಿಯ ತೊಂದರೆ ಉಂಟಾಗದಂತೆ ನೋಡಿಕೊಳ್ಳುವುದು ಶಾಲಾ ಮುಖ್ಯಸ್ಥರ ಜವಾಬ್ದಾರಿಯಾಗಿದೆ. ಚಿತ್ರೀಕರಣ ಚಟುವಟಿಕೆಗಳು ಶೈಕ್ಷಣಿಕ ಕಾರ್ಯಕ್ರಮಗಳಿಗೆ ಅಡಚಣೆ ಉಂಟುಮಾಡುವ ಸಾಧ್ಯತೆ ಇರುವುದರಿಂದ ಹಾಗೂ ವಿದ್ಯಾರ್ಥಿಗಳ ಕಲಿಕೆಯ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆಯನ್ನು ಪರಿಗಣಿಸಿ ಅನುಮತಿ ನಿರಾಕರಿಸಲಾಗಿದೆ ಎಂದು ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ.

ಇದಲ್ಲದೆ, ಕೆಲವು ಪೋಷಕರು ತಮ್ಮ ಮಕ್ಕಳ ಚಿತ್ರಗಳು ಅಥವಾ ದೃಶ್ಯಗಳು ಮಾಧ್ಯಮಗಳಲ್ಲಿ ಪ್ರಸಾರವಾಗುವುದಕ್ಕೆ ಒಪ್ಪಿಗೆ ನೀಡದಿರುವುದು, ಶಾಲೆಗಳ ಭದ್ರತಾ ಕ್ರಮಗಳನ್ನು ಕಾಪಾಡುವ ಅಗತ್ಯ ಹಾಗೂ ವಿದ್ಯಾರ್ಥಿಗಳ ಮಾನಸಿಕ ಆರೋಗ್ಯದ ಮೇಲೂ ಚಿತ್ರೀಕರಣದ ಪರಿಣಾಮ ಬೀರುವ ಸಾಧ್ಯತೆ ಇರುವುದನ್ನು ಇಲಾಖೆ ಗಮನಿಸಿದೆ.

ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ವಾರ್ಷಿಕ ಶೈಕ್ಷಣಿಕ ಕ್ರಿಯಾ ಯೋಜನೆಯಂತೆ ಶೈಕ್ಷಣಿಕ ಚಟುವಟಿಕೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಶೈಕ್ಷಣೇತರ ಚಟುವಟಿಕೆಗಳಿಗೆ ಪ್ರತ್ಯೇಕ ಅವಕಾಶ ಕಲ್ಪಿಸಲಾಗಿಲ್ಲ ಎಂದು ತಿಳಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆಗಳ ಒಳಗೆ ಅಥವಾ ಶಾಲಾ ಆವರಣದಲ್ಲಿ ಯಾವುದೇ ರೀತಿಯ ಚಲನಚಿತ್ರ ಹಾಗೂ ಇತರೆ ದೃಶ್ಯಮಾಧ್ಯಮಗಳ ಚಿತ್ರೀಕರಣಕ್ಕೆ ಅನುಮತಿ ನೀಡಬಾರದು ಎಂದು ರಾಜ್ಯದ ಎಲ್ಲಾ ಉಪನಿರ್ದೇಶಕರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.

LEAVE A REPLY

Please enter your comment!
Please enter your name here