ಬಿಜೆಪಿಗೆ ಗುಡ್‌ಬೈ ಹೇಳಿದ ಅಣ್ಣಾಮಲೈ; ಹೊಸ ರಾಜಕೀಯ ದಿಕ್ಕಿನತ್ತ ಸಿಂಗಂ!

0
2

ನವದೆಹಲಿ, ಜೂ. 02: ತಮಿಳುನಾಡು ಬಿಜೆಪಿ ನಾಯಕ ಕೆ. ಅಣ್ಣಾಮಲೈ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ವರದಿಯಾಗಿದೆ. ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರನ್ನು ಭೇಟಿ ಮಾಡಿದ ಅಣ್ಣಾಮಲೈ ಅವರು ಮಂಗಳವಾರ ರಾಜೀನಾಮೆ ಪತ್ರ ನೀಡಿರುವುದಾಗಿ ಮೂಲಗಳು ತಿಳಿಸಿವೆ.

ರಾಜೀನಾಮೆಯ ಬಳಿಕ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ಇದೇ ವೇಳೆ, ತಮಿಳುನಾಡಿನಲ್ಲಿ ಹೊಸ ರಾಜಕೀಯ ಆಂದೋಲನ ಅಥವಾ ಸಂಘಟನೆಯನ್ನು ಆರಂಭಿಸುವ ಬಗ್ಗೆ ಅಣ್ಣಾಮಲೈ ಚಿಂತನೆ ನಡೆಸಿದ್ದಾರೆ ಎಂಬ ಮಾಹಿತಿ ಹರಿದಾಡುತ್ತಿದೆ.

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೈನಾರ್ ನಾಗೇಂದ್ರನ್ ಅವರನ್ನು ನೇಮಕ ಮಾಡಿದ ಬಳಿಕ ಅಣ್ಣಾಮಲೈ ಪಕ್ಷ ತೊರೆಯುವ ಸಾಧ್ಯತೆಗಳ ಬಗ್ಗೆ ಊಹಾಪೋಹಗಳು ಕೇಳಿಬಂದಿದ್ದವು. ಬಿಜೆಪಿಯಲ್ಲಿ ತಮ್ಮ ರಾಜಕೀಯ ಭವಿಷ್ಯದ ಬಗ್ಗೆ ಅಸಮಾಧಾನ ಹೊಂದಿದ್ದರು ಎನ್ನುವ ಮಾತುಗಳೂ ಪಕ್ಷದ ವಲಯದಲ್ಲಿ ಚರ್ಚೆಗೆ ಕಾರಣವಾಗಿದ್ದವು.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಹಾಗೂ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರೊಂದಿಗೆ ನಡೆದ ಮಹತ್ವದ ಸಭೆಯಲ್ಲಿ ಅಣ್ಣಾಮಲೈ ತಮ್ಮ ಮುಂದಿನ ರಾಜಕೀಯ ದಾರಿಯ ಕುರಿತು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ತಮ್ಮದೇ ಆದ ಜನಾಂದೋಲನ ರೂಪಿಸುವ ಇಚ್ಛೆಯನ್ನು ಅವರು ಪಕ್ಷದ ವರಿಷ್ಠರಿಗೆ ತಿಳಿಸಿರುವುದಾಗಿ ಮೂಲಗಳು ಹೇಳಿವೆ.
ಇದೀಗ ಬಿಜೆಪಿ ನಾಯಕತ್ವ ಅಣ್ಣಾಮಲೈ ಅವರನ್ನು ಪಕ್ಷದಲ್ಲೇ ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದು, ರಾಷ್ಟ್ರೀಯ ಮಟ್ಟದಲ್ಲಿ ಪ್ರಮುಖ ಜವಾಬ್ದಾರಿ ನೀಡುವ ಸಾಧ್ಯತೆಯೂ ಇದೆ ಎಂದು ತಿಳಿದುಬಂದಿದೆ. ಮುಂದಿನ ಸೂಚನೆ ಸಿಗುವವರೆಗೂ ದೆಹಲಿಯಲ್ಲೇ ಉಳಿಯುವಂತೆ ಅವರಿಗೆ ಸೂಚಿಸಲಾಗಿದೆ ಎನ್ನಲಾಗಿದೆ.

ದಿನಗಳಲ್ಲಿ ನಟ-ರಾಜಕಾರಣಿ ವಿಜಯ್ ಅವರ ರಾಜಕೀಯ ಚಟುವಟಿಕೆಗಳು ತಮಿಳುನಾಡಿನ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿವೆ. ಈ ಬೆಳವಣಿಗೆಗಳ ನಡುವೆಯೇ ಅಣ್ಣಾಮಲೈ ಬಿಜೆಪಿಯಿಂದ ದೂರವಾಗುತ್ತಿರುವ ಸುದ್ದಿ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ.

ರಾಜ್ಯದಲ್ಲಿ ಸಾಂಪ್ರದಾಯಿಕ ದ್ರಾವಿಡ ರಾಜಕೀಯಕ್ಕೆ ಪರ್ಯಾಯ ಶಕ್ತಿಗಳ ಉದಯದ ಕುರಿತು ಚರ್ಚೆಗಳು ನಡೆಯುತ್ತಿದ್ದು, ಅಣ್ಣಾಮಲೈ ಅವರ ಮುಂದಿನ ನಡೆ ರಾಜಕೀಯ ವಲಯದ ಕುತೂಹಲವನ್ನು ಹೆಚ್ಚಿಸಿದೆ.

ಮುಂದಿನ ನಡೆ ಏನು?

2020ರಲ್ಲಿ ರಾಜಕೀಯ ಪ್ರವೇಶಿಸಿ ತಮಿಳುನಾಡು ಬಿಜೆಪಿಯ ಅತಿ ಕಿರಿಯ ರಾಜ್ಯಾಧ್ಯಕ್ಷರಾಗಿದ್ದ ಅಣ್ಣಾಮಲೈ, ಹೊಸ ಜನಾಂದೋಲನ ಆರಂಭಿಸುವ ಕುರಿತು ಚಿಂತನೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಆದರೆ ಅದು ಮುಂದಿನ ದಿನಗಳಲ್ಲಿ ರಾಜಕೀಯ ಪಕ್ಷವಾಗಿ ರೂಪುಗೊಳ್ಳಲಿದೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.
ಈ ಕುರಿತು ಅಣ್ಣಾಮಲೈ ಯಾವುದೇ ಅಧಿಕೃತ ಸ್ಪಷ್ಟನೆ ನೀಡಿಲ್ಲ. ಮುಂದಿನ ಎರಡು ದಿನಗಳಲ್ಲಿ ತಮ್ಮ ನಿಲುವು ಪ್ರಕಟಿಸುವುದಾಗಿ ಅವರು ಹೇಳಿದ್ದಾರೆ ಎನ್ನಲಾಗಿದೆ.

ಬಿಜೆಪಿಗೆ ಹಿನ್ನಡೆಯೇ?
ಇತ್ತೀಚೆಗೆ ಸಿಬಿಎಸ್‌ಇ ತ್ರಿಭಾಷಾ ನೀತಿ ಸೇರಿದಂತೆ ಕೆಲವು ಕೇಂದ್ರ ಸರ್ಕಾರದ ನಿಲುವುಗಳ ಬಗ್ಗೆ ಅಣ್ಣಾಮಲೈ ಭಿನ್ನಾಭಿಪ್ರಾಯ ವ್ಯಕ್ತಪಡಿಸಿದ್ದರು. ಅಲ್ಲದೆ, 2026ರ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದೂ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿತ್ತು.

ಈ ಎಲ್ಲ ಬೆಳವಣಿಗೆಗಳ ನಡುವೆ ಅಣ್ಣಾಮಲೈ ಅವರ ರಾಜೀನಾಮೆ ಹಾಗೂ ಹೊಸ ರಾಜಕೀಯ ಆಂದೋಲನದ ಸಾಧ್ಯತೆ ತಮಿಳುನಾಡು ಮಾತ್ರವಲ್ಲದೆ ರಾಷ್ಟ್ರೀಯ ರಾಜಕೀಯದಲ್ಲಿಯೂ ಗಮನ ಸೆಳೆದಿದೆ.

LEAVE A REPLY

Please enter your comment!
Please enter your name here