ನಟ ವಿಜಯ್ ರಾಘವೇಂದ್ರ ತಾಯಿ ಜಯಮ್ಮ ನಿಧನ

0
2

ಬೆಂಗಳೂರು, ಜೂ.16: ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ ಎಸ್.ಎ. ಚಿನ್ನೇಗೌಡ ಅವರ ಪತ್ನಿ ಹಾಗೂ ನಟರಾದ ವಿಜಯ್ ರಾಘವೇಂದ್ರ ಮತ್ತು ಶ್ರೀಮುರಳಿ ಅವರ ತಾಯಿ ಜಯಮ್ಮ ಅವರು ಇಂದು ಬೆಳಗ್ಗೆ ವಿಧಿವಶರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಜೂನ್ 16ರಂದು ಬೆಳಗ್ಗೆ 7.05ಕ್ಕೆ ಕೊನೆಯುಸಿರೆಳೆದಿದ್ದಾರೆ.

ಜಯಮ್ಮ ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಚಿತ್ರರಂಗದ ಗಣ್ಯರು, ಅಭಿಮಾನಿಗಳು ಹಾಗೂ ಆಪ್ತರು ಸಂತಾಪ ಸೂಚಿಸಿದ್ದಾರೆ. ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕಿ ಪಾರ್ವತಮ್ಮ ರಾಜ್‌ಕುಮಾರ್ ಅವರ ಸಹೋದರರಾಗಿರುವ ಎಸ್.ಎ. ಚಿನ್ನೇಗೌಡ ಅವರ ಪತ್ನಿಯಾಗಿದ್ದ ಜಯಮ್ಮ ಅವರು ಕುಟುಂಬದೊಂದಿಗೆ ಚಿತ್ರರಂಗದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.

ಜಯಮ್ಮ ಅವರು 2006ರಲ್ಲಿ ಪತಿ ಎಸ್.ಎ. ಚಿನ್ನೇಗೌಡ ಅವರೊಂದಿಗೆ ಪುತ್ರ ವಿಜಯ್ ರಾಘವೇಂದ್ರ ಅಭಿನಯದ ‘ಸೇವಂತಿ ಸೇವಂತಿ’ ಚಿತ್ರವನ್ನು ನಿರ್ಮಿಸಿದ್ದರು. ಎಸ್. ನಾರಾಯಣ್ ನಿರ್ದೇಶನ ಹಾಗೂ ರಮ್ಯಾ ನಾಯಕಿಯಾಗಿ ಅಭಿನಯಿಸಿದ್ದ ಈ ಚಿತ್ರ 100 ದಿನಗಳ ಯಶಸ್ವಿ ಪ್ರದರ್ಶನ ಕಂಡಿತ್ತು. ಬಳಿಕ 2008ರಲ್ಲಿ ವಿಜಯ್ ರಾಘವೇಂದ್ರ ಅಭಿನಯದ, ಫಣಿ ರಾಮಚಂದ್ರ ನಿರ್ದೇಶನದ ‘ಗಣೇಶ ಮತ್ತೆ ಬಂದ’ ಚಿತ್ರಕ್ಕೂ ನಿರ್ಮಾಪಕರಾಗಿ ಕಾರ್ಯನಿರ್ವಹಿಸಿದ್ದರು.

ಇತ್ತೀಚಿನ ದಿನಗಳಲ್ಲಿ ಪುತ್ರ ಶ್ರೀಮುರಳಿ ಅವರೊಂದಿಗೆ ವಾಸವಾಗಿದ್ದ ಜಯಮ್ಮ ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನ ವಸಂತನಗರದಲ್ಲಿರುವ ಶ್ರೀಮುರಳಿ ಅವರ ಅಪಾರ್ಟ್‌ಮೆಂಟ್‌ನಲ್ಲಿ ಮಧ್ಯಾಹ್ನ 3 ಗಂಟೆಯವರೆಗೆ ಸಾರ್ವಜನಿಕರ ಅಂತಿಮ ದರ್ಶನಕ್ಕಾಗಿ ಇರಿಸಲಾಗಿದ್ದು, ಬಳಿಕ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ಜಯಮ್ಮ ಅವರ ಅಗಲಿಕೆಯಿಂದ ಕನ್ನಡ ಚಿತ್ರರಂಗಕ್ಕೆ ಹಾಗೂ ಕುಟುಂಬಕ್ಕೆ ಅಪಾರ ನಷ್ಟ ಉಂಟಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಹಲವರು ಪ್ರಾರ್ಥಿಸಿದ್ದಾರೆ.

LEAVE A REPLY

Please enter your comment!
Please enter your name here