ಬೆಂಗಳೂರು ನಿವಾಸಿಗಳೇ ಹುಷಾರ್! ಎಲ್ಲೆಂದರಲ್ಲಿ ಕಸ ಎಸೆದರೆ ಬೀಳುತ್ತೆ ದುಪ್ಪಟ್ಟು ದಂಡ!

0
2

ಬೆಂಗಳೂರು, ಜೂ.19: ನಗರದಲ್ಲಿ ಸ್ವಚ್ಛತೆ ಕಾಪಾಡಲು ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಗ್ರೇಟರ್ ಬೆಂಗಳೂರು ಆಡಳಿತ ಮುಂದಾಗಿದೆ. ಇನ್ನು ಮುಂದೆ ರಸ್ತೆ, ಸಾರ್ವಜನಿಕ ಪ್ರದೇಶಗಳಲ್ಲಿ ಕಸ ಸುರಿಯುವವರಿಗೆ ದುಪ್ಪಟ್ಟು ದಂಡ ವಿಧಿಸುವುದರ ಜೊತೆಗೆ, ಅವರು ಎಸೆದ ಕಸವನ್ನು ಅವರಿಂದಲೇ ತೆರವುಗೊಳಿಸುವ ವ್ಯವಸ್ಥೆ ಜಾರಿಗೆ ತರಲು ನಿರ್ಧರಿಸಲಾಗಿದೆ.

ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರ ಅಧ್ಯಕ್ಷತೆಯಲ್ಲಿ ನಡೆದ ಘನತ್ಯಾಜ್ಯ ನಿರ್ವಹಣಾ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ನಗರದ ವಿವಿಧ ಪ್ರದೇಶಗಳಲ್ಲಿ ಕಸ ಎಸೆಯುವ ಪ್ರವೃತ್ತಿಗೆ ಕಡಿವಾಣ ಹಾಕುವ ಉದ್ದೇಶದಿಂದ ಮಾರ್ಷಲ್‌ಗಳ ಬೀಟ್‌ಗಳನ್ನು ಹೆಚ್ಚಿಸಿ, ನಿಯಮ ಉಲ್ಲಂಘಿಸುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.

ನಗರದ ಪ್ರತಿಯೊಂದು ಮನೆಗೂ ಕಸದ ವಾಹನಗಳು ತಲುಪುವಂತೆ ನೋಡಿಕೊಳ್ಳಬೇಕು. ಹಸಿ ಕಸ ಮತ್ತು ಒಣ ಕಸವನ್ನು ಕಡ್ಡಾಯವಾಗಿ ಪ್ರತ್ಯೇಕಿಸಿ ಸಂಗ್ರಹಿಸುವ ವ್ಯವಸ್ಥೆ ಪರಿಣಾಮಕಾರಿಯಾಗಿ ಜಾರಿಯಾಗಬೇಕು ಎಂದು ಸಭೆಯಲ್ಲಿ ಒತ್ತಿ ಹೇಳಲಾಗಿದೆ. ಹಸಿ ತ್ಯಾಜ್ಯವನ್ನು ಎರೆಗೊಬ್ಬರವಾಗಿ ಪರಿವರ್ತಿಸಲು ಹಾಗೂ ಮನೆಮಟ್ಟದಲ್ಲೇ ಕಾಂಪೋಸ್ಟ್ ತಯಾರಿಕೆ ಕುರಿತು ಜನಜಾಗೃತಿ ಮೂಡಿಸಲು ಸೂಚನೆ ನೀಡಲಾಗಿದೆ.

ನಗರದ ಪ್ರಮುಖ ರಸ್ತೆಗಳಲ್ಲಿ ಸಂಗ್ರಹವಾಗಿರುವ ಕಸ, ಕಟ್ಟಡ ಅವಶೇಷಗಳು (ಡೆಬ್ರಿಸ್) ಹಾಗೂ ಕಳೆಗಳನ್ನು ವಿಶೇಷ ಅಭಿಯಾನದಡಿ ಸಂಪೂರ್ಣವಾಗಿ ತೆರವುಗೊಳಿಸುವ ನಿರ್ಧಾರವೂ ಕೈಗೊಳ್ಳಲಾಗಿದೆ.

ಸಭೆಯ ಬಳಿಕ ಮಾತನಾಡಿದ ಸಚಿವ ಕೃಷ್ಣ ಬೈರೇಗೌಡ, “ಕಸದ ವಾಹನಗಳು ಮನೆ ಬಾಗಿಲಿಗೆ ಬಂದರೂ ಕೆಲವರು ರಸ್ತೆಗಳಲ್ಲೇ ಕಸ ಎಸೆಯುತ್ತಿದ್ದಾರೆ. ಇದರಿಂದ ನಗರದ ಆರೋಗ್ಯ ಮತ್ತು ಸೌಂದರ್ಯಕ್ಕೆ ಧಕ್ಕೆ ಉಂಟಾಗುತ್ತದೆ. ಬೆಂಗಳೂರು ಸ್ವಚ್ಛ ಹಾಗೂ ಸುಂದರ ನಗರವಾಗಬೇಕಾದರೆ ಸಾರ್ವಜನಿಕರ ಸಹಕಾರ ಅತ್ಯಗತ್ಯ” ಎಂದು ಹೇಳಿದರು.

ಇದೇ ವೇಳೆ, ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳಲ್ಲಿ ವಾರ್ಡ್ ರಸ್ತೆಗಳನ್ನು ಅಭಿವೃದ್ಧಿಪಡಿಸಲು ₹2,000 ಕೋಟಿ ವಿಶೇಷ ಅನುದಾನ ಬಿಡುಗಡೆ ಮಾಡಲಾಗಿದ್ದು, ಹಾಳಾಗಿರುವ ರಸ್ತೆಗಳನ್ನು ಗುರುತಿಸಿ ತ್ವರಿತವಾಗಿ ಕಾಮಗಾರಿ ಆರಂಭಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

LEAVE A REPLY

Please enter your comment!
Please enter your name here