ಹೆಚ್ಚುವರಿ ಅಕ್ಕಿಗೆ ಬದಲಾಗಿ ‘ಇಂದಿರಾ ಆಹಾರ ಕಿಟ್’: ಬಜೆಟ್‌ನಲ್ಲಿ ಸಿಎಂ ಘೋಷಣೆ!

0
44

ಬೆಂಗಳೂರು, ಮಾ.06: ಅನ್ನಭಾಗ್ಯ ಯೋಜನೆಯಡಿ ನೀಡಲಾಗುತ್ತಿರುವ ಹೆಚ್ಚುವರಿ 5 ಕೆಜಿ ಅಕ್ಕಿಯ ಬದಲಾಗಿ ತೊಗರಿಬೇಳೆ, ಸಕ್ಕರೆ, ಉಪ್ಪು ಮತ್ತು ಅಡುಗೆ ಎಣ್ಣೆ ಒಳಗೊಂಡ ‘ಇಂದಿರಾ ಆಹಾರ ಕಿಟ್’ ವಿತರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

2026–27ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ವೇಳೆ ಮಾತನಾಡಿದ ಅವರು, ರಾಜ್ಯದ ಬಡವರ ಹಸಿವು ನೀಗಿಸುವ ಉದ್ದೇಶದಿಂದ ಕಳೆದ ಮೂರು ವರ್ಷಗಳಿಂದ 4.54 ಕೋಟಿ ಫಲಾನುಭವಿಗಳಿಗೆ ಪ್ರತಿ ತಿಂಗಳು 5 ಕೆಜಿ ಹೆಚ್ಚುವರಿ ಅಕ್ಕಿ ವಿತರಿಸಲಾಗುತ್ತಿದೆ ಎಂದು ತಿಳಿಸಿದರು. ಈ ಯೋಜನೆಗಾಗಿ ಸರ್ಕಾರ ಈಗಾಗಲೇ 17,167 ಕೋಟಿ ರೂ. ವೆಚ್ಚ ಮಾಡಿದೆ ಎಂದು ಹೇಳಿದರು.

ಈಗ ಹೆಚ್ಚುವರಿ ಅಕ್ಕಿಯ ಬದಲಾಗಿ ಪೌಷ್ಟಿಕಾಂಶವುಳ್ಳ ಆಹಾರ ಪದಾರ್ಥಗಳನ್ನು ಒಳಗೊಂಡ ‘ಇಂದಿರಾ ಆಹಾರ ಕಿಟ್’ ನೀಡಲು ಸರ್ಕಾರ ನಿರ್ಧರಿಸಿದೆ. ಈ ಯೋಜನೆಗಾಗಿ ಪ್ರಸ್ತುತ ಸಾಲಿನಲ್ಲಿ 6,200 ಕೋಟಿ ರೂ. ಅನುದಾನವನ್ನು ಮೀಸಲಿಡಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಇದಲ್ಲದೆ, ಆಹಾರ ಧಾನ್ಯಗಳ ವಿತರಣೆಗಾಗಿ ನೀಡುವ ಚಿಲ್ಲರೆ ಹಾಗೂ ಸಗಟು ಲಾಭಾಂಶದ ಪಾವತಿಯಲ್ಲಿ ವಿಳಂಬವಾಗದಂತೆ FIST ಅಪ್ಲಿಕೇಶನ್ ಮೂಲಕ ನೇರ ಪಾವತಿ ವ್ಯವಸ್ಥೆಯನ್ನು ಜಾರಿಗೆ ತರಲಾಗುವುದು ಎಂದು ಹೇಳಿದರು.

ಹಾಗೆಯೇ, ದಾಸೋಹ ಯೋಜನೆಯಡಿ ರಾಜ್ಯದ 274 ಕಲ್ಯಾಣ ಸಂಸ್ಥೆಗಳ 32,059 ಫಲಾನುಭವಿಗಳಿಗೆ ಈಗಾಗಲೇ 14 ಕೋಟಿ ರೂ. ವೆಚ್ಚದಲ್ಲಿ ಆಹಾರ ಭದ್ರತೆ ಒದಗಿಸಲಾಗುತ್ತಿದೆ. ಈ ಯೋಜನೆಯನ್ನು ಇನ್ನಷ್ಟು ವಿಸ್ತರಿಸಿ, ಈ ವರ್ಷ 34 ಹೊಸ ಕಲ್ಯಾಣ ಸಂಸ್ಥೆಗಳ 6,701 ಫಲಾನುಭವಿಗಳಿಗೆ ಸಹ ಆಹಾರ ಸೌಲಭ್ಯ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here