
ಬೆಂಗಳೂರು, ಜ.08: ರಾಜ್ಯದ ವಿವಿಧೆಡೆ ತಾಪಮಾನ ಕುಸಿತಗೊಂಡ ಪರಿಣಾಮ ಚಳಿಯ ತೀವ್ರತೆ ಹೆಚ್ಚಾಗಿದೆ. ಮುಂದಿನ ಏಳು ದಿನಗಳ ಕಾಲ ರಾಜ್ಯಾದ್ಯಂತ ಒಣ ಹವೆ ಮುಂದುವರಿಯುವ ಸಾಧ್ಯತೆಯಿದ್ದು, ಮುಂಜಾನೆ ವೇಳೆಯಲ್ಲಿ ಚಳಿ ಹೆಚ್ಚಾಗುವ ಜೊತೆಗೆ ಕೆಲ ಪ್ರದೇಶಗಳಲ್ಲಿ ಮಂಜಿನ ವಾತಾವರಣ ಕಾಣಿಸಿಕೊಳ್ಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಒಳನಾಡು ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ರಿಂದ 3 ಡಿಗ್ರಿ ಸೆಲ್ಸಿಯಸ್ವರೆಗೆ ಕಡಿಮೆಯಾಗುವ ಸಾಧ್ಯತೆಯಿದೆ. ವಿಶೇಷವಾಗಿ ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ ಹಾಗೂ ಗದಗ ಜಿಲ್ಲೆಗಳಲ್ಲಿ ಮುಂದಿನ ಏಳು ದಿನಗಳ ಕಾಲ ಶೀತಗಾಳಿ ಬೀಸುವ ಮುನ್ಸೂಚನೆ ನೀಡಲಾಗಿದೆ.
ಇದರ ನಡುವೆ, ರಾಜ್ಯದ ದಕ್ಷಿಣ ಒಳನಾಡು ಹಾಗೂ ಮಲೆನಾಡು ಭಾಗಗಳಲ್ಲಿ ಜನವರಿ 9 ರಿಂದ 12 ರವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರು ನಗರದಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರುವ ಸಾಧ್ಯತೆಯಿದ್ದು, ಮುಂಜಾನೆ ವೇಳೆಯಲ್ಲಿ ಮಂಜು ಆವರಿಸುವ ಸಂಭವವಿದೆ. ಚಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಹವಾಮಾನ ಇಲಾಖೆ ಸಲಹೆ ನೀಡಿದೆ.





