ಗದಗ: ಅತಿವೃಷ್ಟಿಯಿಂದ ಹಾನಿಗೊಳಗಾದ ಬೆಳೆಗಳಿಗೆ ಸೂಕ್ತ ಪರಿಹಾರ ಒದಗಿಸಲು ಒತ್ತಾಯಿಸಿದ ರೈತರು, ಎತ್ತು ಹಾಗೂ ಚಕ್ಕಡಿಗಳೊಂದಿಗೆ ತಹಶೀಲ್ದಾರ್ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ಜಿಲ್ಲೆ ಮುಂಡರಗಿ (Mundaragi) ಪಟ್ಟಣದಲ್ಲಿ ನಡೆದಿದೆ.
ಪಟ್ಟಣದ ತಹಶೀಲ್ದಾರ್ ಕಚೇರಿ ಮುಂದೆ ಎತ್ತು ಮತ್ತು ಚಕ್ಕಡಿಗಳನ್ನು ನಿಲ್ಲಿಸಿ ರೈತರು ಪ್ರತಿಭಟನೆ ನಡೆಸಿದರು. ಹೆಸರು, ಮೆಕ್ಕೆಜೋಳ, ಹತ್ತಿ, ಈರುಳ್ಳಿ, ಸೂರ್ಯಕಾಂತಿ ಸೇರಿದಂತೆ ಅನೇಕ ಬೆಳೆಗಳು ಮಳೆಯಿಂದ ನಾಶವಾಗಿವೆ. ಸಾಕಷ್ಟು ಸಾಲ ಮಾಡಿ ಬೆಳೆದ ಬೆಳೆಗಳು ಕೈತಪ್ಪಿ, ಅನ್ನದಾತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಉಳಿದ ಸ್ವಲ್ಪ ಬೆಳೆಗೆ ಖರೀದಿ ಕೇಂದ್ರಗಳಿಲ್ಲದ ಕಾರಣ, ತಕ್ಷಣ ಖರೀದಿ ಕೇಂದ್ರಗಳನ್ನು ಆರಂಭಿಸಬೇಕು ಎಂದು ಆಗ್ರಹಿಸಿದರು. ಜೊತೆಗೆ, ಬೆಳೆ ವಿಮೆ ಏಜೆಂಟ್‌ಗಳ ದೌರ್ಜನ್ಯವನ್ನು ತಡೆಗಟ್ಟಬೇಕು ಎಂದು ರೈತರು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ರೈತರು ಕೃಷಿ ಅಧಿಕಾರಿಗಳು ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಅಧಿಕಾರಿಗಳು ಬೆಳೆ ಸಮೀಕ್ಷೆಯನ್ನು ಸರಿಯಾಗಿ ನಡೆಸದೇ, ಕೇವಲ ಕಾಟಾಚಾರಕ್ಕಾಗಿ ನಡೆಸುತ್ತಿದ್ದಾರೆ ಎಂದು ಅವರು ಆರೋಪಿಸಿದರು.
ಮತ್ತಷ್ಟು ಓದಿ: ದಾವಣಗೆರೆ | ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಚಿರತೆಯ ದಾಳಿ
ಬಳಿಕ ಪ್ರತಿಭಟನಾ ಸ್ಥಳಕ್ಕೆ ಬಂದ ಕೃಷಿ ಅಧಿಕಾರಿಗಳನ್ನು ರೈತರು ತರಾಟೆಗೆ ತೆಗೆದುಕೊಂಡರು. ಕೆಲಕಾಲ ರಸ್ತೆ ಬಂದ್ ಮಾಡಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು. ನಂತರ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ನಿಯಂತ್ರಿಸಲು ಮುಂದಾದರು. ಈ ಪ್ರತಿಭಟನೆಯಲ್ಲಿ ರೈತ ಮುಖಂಡರು, ಮಹಿಳೆಯರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.
