ನವದೆಹಲಿ, ಜು.17: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು 2026ರ ಡಿಸೆಂಬರ್ 31ರೊಳಗೆ ನಡೆಸಲು ರಾಜ್ಯ ಸರ್ಕಾರ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ಅಂಗೀಕರಿಸಿದೆ. ಈ ಮೂಲಕ ಚುನಾವಣಾ ಪ್ರಕ್ರಿಯೆ ಪೂರ್ಣಗೊಳಿಸಲು ಸರ್ಕಾರಕ್ಕೆ ಹೆಚ್ಚುವರಿ ಕಾಲಾವಕಾಶ ದೊರೆತಿದೆ.
ಈ ಮೊದಲು ಜಿಬಿಎ ಚುನಾವಣೆ ಪ್ರಕ್ರಿಯೆಯನ್ನು ಆಗಸ್ಟ್ 31ರೊಳಗೆ ಪೂರ್ಣಗೊಳಿಸುವಂತೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿತ್ತು. ಆದರೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision – SIR) ನಡೆಯುತ್ತಿರುವ ಹಿನ್ನೆಲೆಯಲ್ಲಿ ನಿಗದಿತ ಅವಧಿಯಲ್ಲಿ ಚುನಾವಣೆ ನಡೆಸಲು ಸಾಧ್ಯವಾಗುವುದಿಲ್ಲ ಎಂದು ರಾಜ್ಯ ಸರ್ಕಾರ ಹಾಗೂ ಗ್ರೇಟರ್ ಬೆಂಗಳೂರು ಪ್ರಾಧಿಕಾರ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದವು.
ಈ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಸುಪ್ರೀಂ ಕೋರ್ಟ್ ಪೀಠವು ಸರ್ಕಾರದ ವಾದವನ್ನು ಪರಿಗಣಿಸಿ, ಜಿಬಿಎ ವ್ಯಾಪ್ತಿಯ ಐದು ಮಹಾನಗರ ಪಾಲಿಕೆಗಳ 369 ವಾರ್ಡ್‌ಗಳಿಗೆ 2026ರ ಡಿಸೆಂಬರ್ 31ರೊಳಗೆ ಚುನಾವಣೆ ನಡೆಸುವಂತೆ ಹೊಸ ಗಡುವು ನಿಗದಿಪಡಿಸಿದೆ.
ಇದರಿಂದ ಮತದಾರರ ಪಟ್ಟಿಯ ಪರಿಷ್ಕರಣೆ ಪೂರ್ಣಗೊಂಡ ಬಳಿಕ ಚುನಾವಣೆ ನಡೆಸಲು ರಾಜ್ಯ ಸರ್ಕಾರಕ್ಕೆ ಅವಕಾಶ ದೊರೆತಿದ್ದು, ಜಿಬಿಎ ಚುನಾವಣೆಗೆ ಸಂಬಂಧಿಸಿದ ಅನಿಶ್ಚಿತತೆಗೆ ತಾತ್ಕಾಲಿಕ ತೆರೆ ಬಿದ್ದಂತಾಗಿದೆ.




