ಒಂದು ಗೋಲ್ಡ್ ಪಾಸ್ಗೆ ಒಬ್ಬರಿಗೆ ಮಾತ್ರ ದರ್ಶನಕ್ಕೆ ಅವಕಾಶ: ಸಚಿವ ಕೆ.ಎಂ. ಶಿವಲಿಂಗೇಗೌಡ
ಹಾಸನ, ಅ.28: ಪ್ರಸಿದ್ಧ ಹಾಸನಾಂಬೆ ದೇವಿ ದರ್ಶನೋತ್ಸವ ಗುರುವಾರದಿಂದ 14 ದಿನಗಳ ಕಾಲ ನಡೆಯಲಿದ್ದು, ಭಕ್ತರಿಗೆ ಸುಗಮ ದರ್ಶನ ಕಲ್ಪಿಸಲು ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ನಾಳೆ ಹಾಸನಾಂಬೆ ದೇವಿಯ ಗರ್ಭಗುಡಿಯ ಬಾಗಿಲು ತೆರೆಯಲಿದ್ದು, ಗೋಲ್ಡ್ ಪಾಸ್ ಹೊಂದಿರುವ ಒಬ್ಬರಿಗೆ ಮಾತ್ರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ ತಿಳಿಸಿದರು.
ಹಾಸನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾಸನಾಂಬೆ ಜಾತ್ರಾ ಮಹೋತ್ಸವವು ರಾಜ್ಯದ ಗಮನ ಸೆಳೆಯುವ ನಾಡಹಬ್ಬವಾಗಿ ರೂಪುಗೊಂಡಿದೆ. ಕಳೆದ ವರ್ಷದಂತೆಯೇ ಈ ಬಾರಿಯೂ ಭಕ್ತರಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವುದರ ಜತೆಗೆ ವಿವಿಧ ಸಾಂಸ್ಕೃತಿಕ ಹಾಗೂ ಕ್ರೀಡಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಹೇಳಿದರು.
ಮೈಸೂರು ದಸರಾ ಮಾದರಿಯಲ್ಲಿ ಹಾಸನದಲ್ಲಿಯೂ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳಿಗೆ ಆದ್ಯತೆ ನೀಡಲಾಗಿದೆ. ನಗರದ ನಗರಸಭೆ ವಸ್ತುಪ್ರದರ್ಶನ ಆವರಣದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಮಹಿಳೆಯರು ಹಾಗೂ ಪುರುಷರಿಗಾಗಿ ಕುಸ್ತಿ ಪಂದ್ಯಾವಳಿಗಳನ್ನು ಆಯೋಜಿಸಲಾಗಿದೆ. ಈ ಪಂದ್ಯಾವಳಿಯಲ್ಲಿ 400ಕ್ಕೂ ಹೆಚ್ಚು ಕುಸ್ತಿಪಟುಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಗಣ್ಯರ ದರ್ಶನಕ್ಕೆ ಪ್ರತ್ಯೇಕ ವ್ಯವಸ್ಥೆ
ಗಣ್ಯರಿಗೆ ದೇವಿಯ ದರ್ಶನ ಕಲ್ಪಿಸಲು ಜಿಲ್ಲಾಡಳಿತದ ವತಿಯಿಂದಲೇ ವ್ಯವಸ್ಥೆ ಮಾಡಲಾಗುವುದು. ಬೆಳಿಗ್ಗೆ 10.30ರಿಂದ ಮಧ್ಯಾಹ್ನ 12.30ರವರೆಗೆ ಎರಡು ಗಂಟೆಗಳ ಕಾಲ ಗಣ್ಯರಿಗೆ ದರ್ಶನಕ್ಕೆ ಅವಕಾಶ ನೀಡಲಾಗುವುದು ಎಂದು ಸಚಿವರು ಹೇಳಿದರು.
ಗೋಲ್ಡ್ ಪಾಸ್ಗೆ ಒಬ್ಬರಿಗೆ ಮಾತ್ರ ಅವಕಾಶ
ಗೋಲ್ಡ್ ಪಾಸ್ ಹೊಂದಿರುವ ಭಕ್ತರಿಗೆ ಬೆಳಿಗ್ಗೆ 8ರಿಂದ 10 ಗಂಟೆಯವರೆಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು. ಒಂದು ಗೋಲ್ಡ್ ಪಾಸ್ನಲ್ಲಿ ಒಬ್ಬರಿಗೆ ಮಾತ್ರ ಪ್ರವೇಶ ನೀಡಲಾಗುತ್ತದೆ. ದರ್ಶನೋತ್ಸವದ ಮೊದಲ ಹಾಗೂ ಕೊನೆಯ ದಿನ ಯಾವುದೇ ಶಿಷ್ಟಾಚಾರ ಅಥವಾ ಪಾಸ್ ವ್ಯವಸ್ಥೆ ಇರುವುದಿಲ್ಲ ಎಂದು ಸಚಿವ ಕೆ.ಎಂ. ಶಿವಲಿಂಗೇಗೌಡ ಸ್ಪಷ್ಟಪಡಿಸಿದರು.




