ಜಮ್ಮು: ಮಾಜಿ‌ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಮೇಲೆ ಗುಂಡಿನ ದಾಳಿ; ಕೂದಲೆಳೆ ಅಂತರದಲ್ಲಿ ಪಾರು!

0
7
Advertisement

ಜಮ್ಮು, ಮಾ.12: ಜಮ್ಮುವಿನಲ್ಲಿ ನಡೆದ ವಿವಾಹ ಸಮಾರಂಭದ ವೇಳೆ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಡಾ. ಫಾರೂಕ್ ಅಬ್ದುಲ್ಲಾ ಅವರ ಮೇಲೆ ಗುಂಡಿನ ದಾಳಿ ನಡೆಸಲು ಯತ್ನಿಸಿದ ಘಟನೆ ಬುಧವಾರ ನಡೆದಿದೆ. ಆದರೆ ಭದ್ರತಾ ಸಿಬ್ಬಂದಿಯ ತ್ವರಿತ ಕ್ರಮದಿಂದ ಅವರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.

ಜಮ್ಮುವಿನ ಗ್ರೇಟರ್ ಕೈಲಾಶ್ ಪ್ರದೇಶದಲ್ಲಿ ವಕೀಲರೊಬ್ಬರ ವಿವಾಹ ಸಮಾರಂಭದಲ್ಲಿ ಫಾರೂಕ್ ಅಬ್ದುಲ್ಲಾ ಭಾಗವಹಿಸಿದ್ದ ವೇಳೆ ಈ ಘಟನೆ ನಡೆದಿದೆ. ಕಮಲ್ ಸಿಂಗ್ ಜಮ್ವಾಲ್ ಎಂಬಾತ ಗುಂಡಿನ ದಾಳಿ ನಡೆಸಲು ಯತ್ನಿಸಿದರೆಂದು ತಿಳಿದುಬಂದಿದ್ದು, ಸ್ಥಳದಲ್ಲಿದ್ದ ಭದ್ರತಾ ಸಿಬ್ಬಂದಿ ತಕ್ಷಣವೇ ಆತನನ್ನು ಬಂಧಿಸಿ ವಶಕ್ಕೆ ಪಡೆದಿದ್ದಾರೆ. ಪ್ರಕರಣ ಸಂಬಂಧ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಹಾಗೂ ಫಾರೂಕ್ ಅಬ್ದುಲ್ಲಾ ಅವರ ಪುತ್ರ ಒಮರ್ ಅಬ್ದುಲ್ಲಾ, “ದೇವರು ಕರುಣಾಮಯಿ. ನನ್ನ ತಂದೆ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ದಾಳಿ ನಡೆಸಿದ್ದೇಕೆ ಮತ್ತು ಯಾರು ಎಂಬ ಬಗ್ಗೆ ಇನ್ನೂ ಸಂಪೂರ್ಣ ಮಾಹಿತಿ ಲಭ್ಯವಾಗಿಲ್ಲ. ಲೋಡ್ ಮಾಡಿದ್ದ ಪಿಸ್ತೂಲ್ ಹಿಡಿದ ವ್ಯಕ್ತಿಯೊಬ್ಬರು ನನ್ನ ತಂದೆಯ ಹತ್ತಿರ ಬಂದು ಗುಂಡು ಹಾರಿಸಲು ಯತ್ನಿಸಿದ್ದಾರೆ. ಆದರೆ ಭದ್ರತಾ ಸಿಬ್ಬಂದಿಯ ತಕ್ಷಣದ ಕ್ರಮದಿಂದ ಹತ್ಯೆಯ ಪ್ರಯತ್ನ ವಿಫಲವಾಗಿದೆ,” ಎಂದು ಹೇಳಿದ್ದಾರೆ.

ಘಟನೆಯ ವೇಳೆ ಫಾರೂಕ್ ಅಬ್ದುಲ್ಲಾ ಅವರಿಗೆ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿತ್ತು. ಅವರೊಂದಿಗೆ ಜಮ್ಮು ಮತ್ತು ಕಾಶ್ಮೀರ ಉಪಮುಖ್ಯಮಂತ್ರಿ ಸುರೀಂದರ್ ಚೌಧರಿ ಕೂಡ ಇದ್ದರು. ಈ ವೇಳೆ ಚೌಧರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರಿಗೆ ತಕ್ಷಣವೇ ವೈದ್ಯಕೀಯ ಚಿಕಿತ್ಸೆ ನೀಡಲಾಗಿದೆ.

ಮದುವೆ ಮಂಟಪದ ಹೊರಭಾಗದಲ್ಲಿ ಆರೋಪಿಯು ಕಾಯುತ್ತಿದ್ದನೆಂದು ತಿಳಿದುಬಂದಿದೆ. ಅಬ್ದುಲ್ಲಾ ಹಾಗೂ ಚೌಧರಿ ಹೊರಗೆ ಬರುತ್ತಿದ್ದಂತೆಯೇ ಅವರ ಮೇಲೆ ಗುಂಡು ಹಾರಿಸಲು ಆರೋಪಿ ಯತ್ನಿಸಿದ್ದಾನೆ. ಈ ವೇಳೆ ಸ್ಥಳದಲ್ಲಿದ್ದ ಇಬ್ಬರು ಪೊಲೀಸ್ ಅಧಿಕಾರಿಗಳು ಆತನನ್ನು ತಕ್ಷಣ ತಡೆದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೊಲೀಸ್ ಅಧಿಕಾರಿಗಳೊಂದಿಗೆ ಹೊಡೆದಾಟ ನಡೆಸಿದ ಬಳಿಕವೂ ಆರೋಪಿ ಗುಂಡು ಹಾರಿಸಲು ಯತ್ನಿಸಿದ್ದಾನೆ. ಬಳಿಕ ಬಂದೂಕು ಕಿತ್ತುಕೊಂಡ ಪೊಲೀಸರು ಆತನನ್ನು ಬಂಧಿಸಿ ವಶಕ್ಕೆ ಪಡೆದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement

LEAVE A REPLY

Please enter your comment!
Please enter your name here