
ಬೆಂಗಳೂರು. ನ, 23: ಕಳೆದ ಹಲವು ದಿನಗಳಿಂದ ರಾಜ್ಯದಾದ್ಯಂತ ಮಳೆಯಾಗುತ್ತಿದ್ದು, ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲೂ ಹಗುರ ಮಳೆ ನಿರೀಕ್ಷಿಸಲಾಗಿದೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಜಿಲ್ಲೆಯ ಕೆಲವು ಕಡೆಗಳಲ್ಲಿ ಹಗುರ ಮಳೆಯಾಗಲಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಬೆಂಗಳೂರು (ಗ್ರಾಮಾಂತರ ಮತ್ತು ನಗರ), ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ.
ಬೆಂಗಳೂರಿನ ಸುತ್ತ ಮುತ್ತ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮುಂಜಾನೆಯ ಸಮಯದಲ್ಲಿ ಕೆಲವು ಪ್ರದೇಶಗಳಲ್ಲಿ ಮಂಜು ಕವಿಯುವ ಸಾಧ್ಯತೆಯಿದ್ದು, ಗರಿಷ್ಠ ತಾಪಮಾನ 27°C ಮತ್ತು ಕನಿಷ್ಠ ತಾಪಮಾನ 20°C ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.





