ಸಿಂಧನೂರು, ಆ.05: ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಅಂಬೇಡ್ಕರ್ ಬಾಲಕಿಯರ ವಸತಿ ನಿಲಯದಲ್ಲಿ ಮಂಗಳವಾರ ಮಧ್ಯಾಹ್ನ ಉಪಹಾರ ಸೇವಿಸಿದ ಬಳಿಕ ಹತ್ತಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥಗೊಂಡು ಸರ್ಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದ ಘಟನೆ ನಡೆದಿದೆ.
ಉಪಹಾರ ಸೇವಿಸಿದ ಸ್ವಲ್ಪ ಸಮಯದಲ್ಲೇ ಕೆಲ ವಿದ್ಯಾರ್ಥಿನಿಯರಿಗೆ ಹೊಟ್ಟೆನೋವು, ತಲೆನೋವು, ತಲೆಸುತ್ತು ಸೇರಿದಂತೆ ಅಸ್ವಸ್ಥತೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವಸತಿ ನಿಲಯದ ಸಿಬ್ಬಂದಿ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿದರು. ವೈದ್ಯರು ವಿದ್ಯಾರ್ಥಿನಿಯರಿಗೆ ಅಗತ್ಯ ಚಿಕಿತ್ಸೆ ನೀಡಿದ್ದು, ರಾತ್ರಿ ಪೂರ್ತಿ ಕೆಲವರು ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆದರು.
ಬುಧವಾರ ಬೆಳಿಗ್ಗೆಯೂ ಕೆಲ ವಿದ್ಯಾರ್ಥಿನಿಯರಿಗೆ ಹೊಟ್ಟೆನೋವು ಹಾಗೂ ತೀವ್ರ ತಲೆನೋವು ಮುಂದುವರಿದ ಹಿನ್ನೆಲೆಯಲ್ಲಿ ಕರ್ತವ್ಯ ನಿರತ ವೈದ್ಯರು ಹೆಚ್ಚಿನ ಪರೀಕ್ಷೆಗಾಗಿ ಸೂರ್ಯ ಸ್ಕ್ಯಾನಿಂಗ್ ಸೆಂಟರ್‌ನಲ್ಲಿ ಸ್ಕ್ಯಾನಿಂಗ್ ಮಾಡಿಸಿಕೊಳ್ಳುವಂತೆ ಸೂಚಿಸಿದರು. ಅನಿತಾ, ಸಂಜನಾ, ಕೀರ್ತಿ, ಭಾಗ್ಯಮ್ಮ ಸೇರಿದಂತೆ ಕೆಲ ವಿದ್ಯಾರ್ಥಿನಿಯರನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಪ್ರೀತಿ, ಭೂಮಿಕಾ, ಸಿಂಧೂ, ತಾಯಮ್ಮ ಹಾಗೂ ಚೈತ್ರ ಸೇರಿದಂತೆ ಇನ್ನೂ ಕೆಲವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಸಿದ್ದಾರೆ.
ವಿದ್ಯಾರ್ಥಿನಿಯರು ಅಸ್ವಸ್ಥಗೊಂಡ ಸುದ್ದಿ ತಿಳಿಯುತ್ತಿದ್ದಂತೆ ಪೋಷಕರು ಆಸ್ಪತ್ರೆಗೆ ಧಾವಿಸಿ ಮಕ್ಕಳ ಆರೋಗ್ಯ ವಿಚಾರಿಸಿದರು. ಸ್ಥಳೀಯರು ಕೂಡ ಆಸ್ಪತ್ರೆಗೆ ಭೇಟಿ ನೀಡಿ ಘಟನೆಯ ಬಗ್ಗೆ ಮಾಹಿತಿ ಪಡೆದರು. ಘಟನೆ ಕುರಿತು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಲು ಪ್ರಯತ್ನಿಸಿದರೂ ಯಾವುದೇ ಸ್ಪಷ್ಟ ಪ್ರತಿಕ್ರಿಯೆ ದೊರೆಯಲಿಲ್ಲ ಎಂಬ ಆರೋಪ ಕೇಳಿಬಂದಿದೆ. ಘಟನೆಯ ಕುರಿತು ಸಮಗ್ರ ತನಿಖೆ ನಡೆಸಿ, ವಿದ್ಯಾರ್ಥಿನಿಯರ ಅಸ್ವಸ್ಥತೆಗೆ ಕಾರಣವೇನು ಎಂಬುದನ್ನು ಪತ್ತೆಹಚ್ಚಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪೋಷಕರು ಹಾಗೂ ಸ್ಥಳೀಯರು ಆಗ್ರಹಿಸಿದ್ದಾರೆ.




